ಪ್ರಧಾನಿ ಮೋದಿ
(ಪಿಟಿಐ ಚಿತ್ರ)
ನವದೆಹಲಿ: ಲೋಕಸಭಾ ಚುನಾವಣೆಯ ಏಳನೇ ಹಾಗೂ ಕೊನೆಯ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತದಾರರಿಗೆ ಕರೆ ನೀಡಿದ್ದಾರೆ.
'ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದೆ. ಪ್ರಜಾಪ್ರಭುತ್ವದ ಈ ಮಹಾನ್ ಹಬ್ಬದಲ್ಲಿ ಎಲ್ಲಾ ಮತದಾರರು ಉತ್ಸಾಹದಿಂದ ಭಾಗವಹಿಸಬೇಕೆಂದು ನಾನು ವಿನಂತಿಸುತ್ತೇನೆ. ಯುವ ಮತ್ತು ಮಹಿಳಾ ಮತದಾರರು ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ನಾವೆಲ್ಲರೂ ಒಟ್ಟಾಗಿ ನಮ್ಮ ಪ್ರಜಾಪ್ರಭುತ್ವವನ್ನು ಇನ್ನಷ್ಟು ಶಕ್ತಿಯುತಗೊಳಿಸೋಣ' ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಣದಲ್ಲಿರುವ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರ ಸೇರಿದಂತೆ 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಪಂಜಾಬ್‌ನ ಎಲ್ಲ 13 ಮತ್ತು ಹಿಮಾಚಲ ಪ್ರದೇಶದ ಎಲ್ಲ ನಾಲ್ಕು ಕ್ಷೇತ್ರಗಳಿಗೆ, ಒಡಿಶಾದ 6 ಲೋಕಸಭಾ ಕ್ಷೇತ್ರಗಳಲ್ಲದೆ, 147 ವಿಧಾನಸಭಾ ಕ್ಷೇತ್ರಗಳ ಪೈಕಿ ಇನ್ನುಳಿದ 42 ಸ್ಥಾನಗಳಿಗೂ ಏಕಕಾಲಕ್ಕೆ ಮತದಾನ ನಡೆಯುತ್ತಿದೆ. ಅಲ್ಲದೇ ಹಿಮಾಚಲ ಪ್ರದೇಶದ ಆರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಉಪಚುನಾವಣೆ ನಡೆಯುತ್ತಿದೆ.
ಶನಿವಾರದ ಮತದಾನ ಪೂರ್ಣಗೊಂಡರೆ ಏಪ್ರಿಲ್ 19ರಂದು ಪ್ರಾರಂಭವಾದ 7 ಹಂತಗಳ ಮತದಾನದ ಪ್ರಕ್ರಿಯೆಗೆ ತೆರೆಬೀಳಲಿದೆ. ಇದುವರೆಗಿನ 6 ಹಂತಗಳಲ್ಲಿ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 486 ಕ್ಷೇತ್ರಗಳಲ್ಲಿ ಮತದಾನ ಪೂರ್ಣಗೊಂಡಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಗಳಿಗೂ ಮತದಾನ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.