ADVERTISEMENT

ಕರ್ನಾಟಕದ ಮರಾಠಿ ಭಾಷಿಕ ಹಳ್ಳಿಗಳ ಸೇರ್ಪಡೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಿರ್ಣಯ

ಪಿಟಿಐ
Published 27 ಡಿಸೆಂಬರ್ 2022, 9:37 IST
Last Updated 27 ಡಿಸೆಂಬರ್ 2022, 9:37 IST
ದೇವೇಂದ್ರ ಫಡ್ನವೀಸ್‌ ಮತ್ತು ಏಕನಾಥ ಶಿಂದೆ
ದೇವೇಂದ್ರ ಫಡ್ನವೀಸ್‌ ಮತ್ತು ಏಕನಾಥ ಶಿಂದೆ    

ಮುಂಬೈ: ಕರ್ನಾಟಕದ ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರಗಳು ಮತ್ತು865 ಮರಾಠಿ ಭಾಷಿಕರಹಳ್ಳಿಗಳನ್ನು ಸೇರಿಸಿಕೊಳ್ಳಲು ಕಾನೂನಾತ್ಮ ಹೋರಾಟ ನಡೆಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಈ ನಿರ್ಣಯ ಮಂಡಿಸಿದರು. ‘ಕರ್ನಾಟಕ ವಿಧಾನಸಭೆಯಲ್ಲಿ ಇದೇ ವಿಷಯದ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ. ಕರ್ನಾಟಕವು ಉದ್ದೇಶಪೂರ್ವಕವಾಗಿ ಗಡಿ ಕದನಕ್ಕೆ ಉತ್ತೇಜನ ನೀಡಿದೆ’ ಎಂದು ನಿರ್ಣಯದಲ್ಲಿ ಆರೋಪಿಸಲಾಗಿದೆ.

‘ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರ ಮತ್ತು 865 ಹಳ್ಳಿಗಳಲ್ಲಿರುವ ಮರಾಠಿ ಭಾಷಿಕರೊಂದಿಗೆ ಮಹಾರಾಷ್ಟ್ರ ಸರ್ಕಾರ ದೃಢವಾಗಿ ನಿಂತಿದೆ. ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಹಳ್ಳಿಗಳ ಇಂಚು ಭೂಮಿಯನ್ನೂ ಸೇರಿಸಿಕೊಳ್ಳಲು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನುಬದ್ಧವಾಗಿ ಹೋರಾಟ ನಡೆಸಲಿದೆ’ ಎನ್ನುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

ADVERTISEMENT

ಮಹಾರಾಷ್ಟ್ರದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯು ಗುರುವಾರ ಸರ್ವಾನುಮತದಿಂದ ನಿರ್ಣಯವೊಂದನ್ನು ಅಂಗೀಕರಿಸಿತ್ತು. ರಾಜ್ಯದ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಮಹಾರಾಷ್ಟ್ರಕ್ಕೆ ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂದು ನಿರ್ಣಯದಲ್ಲಿ ಹೇಳಲಾಗಿತ್ತು. ವಿವಾದವು ಮಹಾರಾಷ್ಟ್ರದ ಸೃಷ್ಟಿ ಎಂದು ಉಲ್ಲೇಖಿಸಲಾಗಿತ್ತು.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ 1957ಕ್ಕೂ ಹಿಂದಿನದು. ಹಿಂದಿನ ಬಾಂಬೆ ಪ್ರೆಸಿಡೆನ್ಸಿಯ ಭಾಗವಾಗಿದ್ದ ಬೆಳಗಾವಿಯ ಮೇಲೆ ಮಹಾರಾಷ್ಟ್ರ ತನ್ನ ಹಕ್ಕು ಪ್ರತಿಪಾದಿಸುತ್ತಲೇ ಬಂದಿದೆ. ಬೆಳಗಾವಿಯಲ್ಲಿ ಮರಾಠಿಗರು ಗಣನೀಯವಾಗಿರುವುದೂ ಇದಕ್ಕೆ ಕಾರಣವಾಗಿದೆ.

ರಾಜ್ಯಗಳ ಮರವಿಂಗಡಣೆ ಕಾಯ್ದೆ ಮತ್ತು 1967 ರ ಮಹಾಜನ್ ಆಯೋಗದ ವರದಿಯ ಆಧಾರದಲ್ಲಿ ರಚನೆಯಾದ ಭಾಷಾವಾರು ರಾಜ್ಯಗಳ ಗಡಿರೇಖೆಯನ್ನು ಕರ್ನಾಟಕ ಪ್ರತಿಪಾದಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.