ADVERTISEMENT

‘ಮಹಾ‘ಸರ್ಕಾರದ ವಿರುದ್ಧ ಕೇಂದ್ರಕ್ಕೆ ದೂರು ಕೊಟ್ಟರೆ ಕ್ರಮ –ಎನ್‌ಸಿಪಿ, ಕಾಂಗ್ರೆಸ್

ಐಎಎಸ್‌, ಐಪಿಎಸ್‌ ಅಧಿಕಾರಿಗಳಿಗೆ ಎನ್‌ಸಿಪಿ, ಕಾಂಗ್ರೆಸ್‌ ನಾಯಕರ ಎಚ್ಚರಿಕೆ

ಪಿಟಿಐ
Published 25 ಮಾರ್ಚ್ 2021, 10:59 IST
Last Updated 25 ಮಾರ್ಚ್ 2021, 10:59 IST
ಅಜಿತ್‌ ಪವಾರ್‌
ಅಜಿತ್‌ ಪವಾರ್‌   

ಮುಂಬೈ: ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರಕ್ಕೆ ರಹಸ್ಯವಾಗಿ ಯಾವುದೇ ರೀತಿಯ ಮಾಹಿತಿ ನೀಡುವ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎನ್‌ಸಿಪಿ ಮತ್ತು ಕಾಂಗ್ರೆಸ್‌ ನಾಯಕರು ಗುರುವಾರ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ವಿರೋಧಿ ನಾಯಕರ ಹಲವು ರಾಜಕಾರಣಿಗಳ ದೂರವಾಣಿ ಕರೆಗಳನ್ನು ಹಿರಿಯ ಐಪಿಎಸ್‌ ಅಧಿಕಾರಿಯೊಬ್ಬರು ಕದ್ದಿದ್ದಾರೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.

’ಕೆಲವು ಅಧಿಕಾರಿಗಳು ತಪ್ಪು ಮಾಡಿದ್ದಾರೆಯೇ ಅಥವಾ ಇಲ್ಲವೇ ಎನ್ನುವ ಬಗ್ಗೆ ವಿವರವಾದ ವರದಿ ಸಿದ್ಧಪಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಒಂದು ವೇಳೆ ಅಧಿಕಾರಿಗಳು ತಪ್ಪಿತಸ್ಥರಾಗಿದ್ದರೆ ಕ್ರಮಕೈಗೊಳ್ಳಲಾಗುವುದು’ ಎಂದು ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ತಿಳಿಸಿದ್ದಾರೆ.

ADVERTISEMENT

‘ಸಾಮಾನ್ಯವಾಗಿ ಕೆಲವು ಗಂಭೀರ ಕ್ರಮಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ದೂರವಾಣಿ ಕರೆಗಳನ್ನು ಕದಿಯಲಾಗುತ್ತದೆ. ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಪರವಾನಗಿ ಪಡೆದ ನಂತರವೇ ಈ ಕ್ರಮಕೈಗೊಳ್ಳಲಾಗುತ್ತದೆ. ಪ್ರಸ್ತುತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೀತಾರಾಮ್‌ ಕುಂಟೆ ಅವರು ಈ ಹಿಂದೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು. ಹೀಗಾಗಿ, ಅವರಿಗೆ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ’ ಎಂದು ವಿವರಿಸಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರು ಸಹ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕೆಲವು ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ನೆರವಾಗುತ್ತಿದ್ದಾರೆ’ ಎಂದು ದೂರಿದ್ದಾರೆ.

ಸೀತಾರಾಮ್‌ ಕುಂಟೆ ಅವರ ಪರವಾನಗಿ ಪಡೆಯದೆ ಹಿಂದೆ ಗುಪ್ತದಳದ ಕಮಿಷನರ್‌ ಆಗಿದ್ದ ರಷ್ಮಿ ಶುಕ್ಲಾ ಅವರು ದೂರವಾಣಿ ಕರೆಗಳನ್ನು ಕದ್ದಾಲಿಕೆ ಮಾಡಿದ್ದಾರೆ ಎಂದು ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್‌ ಬುಧವಾರ ದೂರಿದ್ದರು.

ಅನುಮತಿ ಪಡೆದು ದೂರವಾಣಿ ಕದ್ದಾಲಿಕೆ ಮಾಡಲಾಗಿದೆ. ಇದರಿಂದಾಗಿಯೇ, ವರ್ಗಾವಣೆ ಹಗರಣ ಬಯಲಾಗಿದೆ ಎಂದು ಬಿಜೆಪಿ ಹೇಳಿದೆ.

‘ರಷ್ಮಿ ಶುಕ್ಲಾ ಅವರ ವರದಿಯನ್ನು ಎಂವಿಎ ಸರ್ಕಾರ ಬಹಿರಂಗಪಡಿಸುತ್ತಿಲ್ಲ. ಗೃಹ ಇಲಾಖೆಯ ಕೆಲವು ಪೊಲೀಸ್‌ ಅಧಿಕಾರಿಗಳು ಮತ್ತು ರಾಜಕಾರಣಿಗಳು ವರ್ಗಾವಣೆ ಹಗರಣದಲ್ಲಿ ಭಾಗಿಯಾಗಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್‌ ದೂರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.