ADVERTISEMENT

ಪುಲೆ ದಂಪತಿಗೆ ‘ಭಾರತ ರತ್ನ’: ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2025, 12:45 IST
Last Updated 24 ಮಾರ್ಚ್ 2025, 12:45 IST
   

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಮಾಜ ಸುಧಾರಕರಾದ ಮಹಾತ್ಮ ಜ್ಯೋತಿ ಬಾಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ದಂಪತಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಭಾರತರತ್ನ’ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನಸಭೆಯು ಸೋಮವಾರ ಒಮ್ಮತದಿಂದ ಅಂಗೀಕರಿಸಿದೆ. 

ಫುಲೆ ದಂಪತಿಯು ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಸಬಲೀಕರಣ, ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ ಹಾಗೂ ಬಾಲ್ಯವಿವಾಹವನ್ನು ತೊಡೆದುಹಾಕಲು ಅವಿರತವಾಗಿ ಶ್ರಮಿಸಿದರು. ಜೊತೆಗೆ ಸತ್ಯಶೋಧಕ ಸಮಾಜ ಸ್ಥಾಪಿಸಿದರು.

ಸಚಿವ ಜಯಕುಮಾರ್ ರಾವಲ್ ಮಂಡಿಸಿದ ಈ ನಿರ್ಣಯವನ್ನು ಎನ್‌ಸಿಪಿ ನಾಯಕ ಛಗನ್ ಭುಜಬಲ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ವಿಜಯ್ ವಡೆಟ್ಟಿವರ್ ಬೆಂಬಲಿಸಿದರು. 

ADVERTISEMENT

ಈ ಕುರಿತು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ‘ಕ್ರಾಂತಿಸೂರ್ಯ ಮಹಾತ್ಮ ಜ್ಯೋತಿಬಾಫುಲೆ ಹಾಗೂ ಕ್ರಾಂತಿಜ್ಯೋತಿ ಸಾವಿತ್ರಿ ಬಾಯಿ ಫುಲೆ ಅವರಿಗೆ ಭಾರತರತ್ನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನಸಭೆಯು ಒಮ್ಮತದಿಂದ ಅಂಗೀಕರಿಸಿದೆ’ ಎಂದು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ. 

ಮಹಾತ್ಮ ಎಂಬ ಬಿರುದು ದೇಶದಲ್ಲಿ ಎಲ್ಲಕ್ಕಿಂತ ಮಿಗಿಲಾದದ್ದು. ಈ ಬಿರುದನ್ನು ಮಹಾತ್ಮ ಫುಲೆ ಮತ್ತು ಮಹಾತ್ಮ ಗಾಂಧೀಜಿ ಅವರು ಮಾತ್ರವೇ ಹೊಂದಿದ್ದಾರೆ ಎಂದು ಅವರು ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.