ಅಪಘಾತ
–ಪ್ರಾತಿನಿಧಿಕ ಚಿತ್ರ
ಮುಂಬೈ: ಅಪಘಾತಕ್ಕೊಳಗಾದವರು ವಿಮಾ ಸೌಲಭ್ಯವಿರುವ ಮತ್ತು ತುರ್ತು ಚಿಕಿತ್ಸಾ ಆಸ್ಪತ್ರೆಗಳಲ್ಲಿ ₹1 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು ಎಂದು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಹೇಳಿದೆ.
ಆರೋಗ್ಯ ಸಚಿವ ಪ್ರಕಾಶ್ ಅಬಿಟ್ಕರ್ ಮಾತನಾಡಿ, ಅಪಘಾತಕ್ಕೊಳಗಾದವರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಮತ್ತು ₹1 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ ಈ ಆರೋಗ್ಯ ಯೋಜನೆಯ ದುರುಪಯೋಗಪಡಿಸಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಯೋಜನೆಯಡಿ ವಿಮಾ ಸೌಲಭ್ಯವಿರುವ ಆಸ್ಪತ್ರೆಗಳ ಸಂಖ್ಯೆಯನ್ನು 1,792 ರಿಂದ 4,180ಕ್ಕೆ ಹೆಚ್ಚಿಸಲಾಗುವುದು. ಈ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಗಳ ಮೂಲಕ ಪಾರದರ್ಶಕವಾಗಿ ಕೈಗೊಳ್ಳಲಾಗುವುದು.
ಸಮಿತಿಯು ಈ ಯೋಜನೆಯಡಿ ನೀಡಬಹುದಾದ ಹೆಚ್ಚಿನ ಚಿಕಿತ್ಸೆ, ಅಂಗಾಂಗ ಕಸಿಯಂತಹ ದುಬಾರಿ ಚಿಕಿತ್ಸೆ, ಪ್ರಾಥಮಿಕ ಚಿಕಿತ್ಸೆಗಳ ದರ ಪಟ್ಟಿ ಸೇರಿ ಇತ್ಯಾದಿಗಳ ವರದಿ ನೀಡಲಿದೆ. ಒಂದು ತಿಂಗಳೊಳಗೆ ವರದಿ ನೀಡುವಂತೆ ಸಮಿತಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿ ದೊರೆಯವ ವಿವಿಧ ಯೋಜನೆಗಳು, ಹಾಸಿಗೆ ಲಭ್ಯತೆ, ದೂರು ದಾಖಲಿಗೆ ಪ್ರತ್ಯೇಕ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು. ವಿಮಾ ಸೌಲಭ್ಯ ಹೊಂದಿರುವ ಎಲ್ಲಾ ಆಸ್ಪತ್ರೆಗಳು ಪ್ರತಿ ತಿಂಗಳು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಬೇಕು, ಜತೆಗೆ ಕನಿಷ್ಠ ಐವರಿಗೆ ಈ ಯೋಜನೆಯಡಿ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.