ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದಾಗಿ ಜಲಾವೃತಗೊಂಡ ರಸ್ತೆಯಲ್ಲಿ ನಡೆದ ಜನರು
ಪಿಟಿಐ ಚಿತ್ರ
ಛತ್ರಪತಿ ಸಂಬಾಜಿನಗರ: 'ಸೆಪ್ಟೆಂಬರ್‌ನಲ್ಲಿ ಸುರಿದ ಮಳೆ ಕೃಷಿ ವಲಯದಲ್ಲಿ ಹಿಂದೆಂದಿಗಿಂತ ಅಪಾರ ಹಾನಿ ಮಾಡಿದೆ. ಹೀಗಾಗಿ ದೀಪಾವಳಿ ಒಳಗೆ ಸಂಕಷ್ಟಕ್ಕೀಡಾದ ರೈತರು ಪರಿಹಾರ ಪಡೆಯಲಿದ್ದಾರೆ’ ಎಂದು ಮಹಾರಾಷ್ಟ್ರ ಕೃಷಿ ಸಚಿವ ದತ್ತಾತ್ರಯ ಭರಣ್ ಬುಧವಾರ ಭರವಸೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅತಿವೃಷ್ಟಿ ಪ್ರದೇಶ ಎಂದು ಘೋಷಿಸುವ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ, ಆದರೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಸಂಬಂಧಿಸಿದ ನಾಯಕರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮರಾಠಾವಾಡದ ನಾಂದೇಡ್ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಯಾಗಿದೆ. ಬೆಳೆ ನಷ್ಟ ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಎಂದರು.
ರೈತರ ಖಾತೆಗಳಿಗೆ ಹಣ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಜುಲೈನಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಬೆಳೆ ನಷ್ಟ ಸಮೀಕ್ಷೆ ಪೂರ್ಣಗೊಂಡಿದ್ದು, ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಹಣ ವರ್ಗಾಯಿಸಲಾಗಿದೆ.
ಸೆಪ್ಟೆಂಬರ್‌ನಲ್ಲಿ ಸುರಿದ ಮಳೆಯಿಂದಾಗಿ ಸುಮಾರು 30 ಹೆಕ್ಟೇರ್ ಕೃಷಿ ಭೂಮಿಗೆ ಹಾನಿಯಾಗಿದೆ. ಇದಕ್ಕೆ ಸಂಬಂದಪಟ್ಟಂತೆ ಶೀಘ್ರದಲ್ಲಿ ಬೆಳೆ ನಷ್ಟ ಸಮೀಕ್ಷೆ ಪೂರ್ಣಗೊಳಿಸಲಾಗುವುದು. ದೀಪಾವಳಿ ಒಳಗೆ ಪರಿಹಾರ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ನಷ್ಟ ಉಂಟಾದ ಜಾಗಗಳಲ್ಲಿ ಸಾಲ ವಸೂಲಿಯನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ಬ್ಯಾಂಕ್‌ಗಳಿಗೆ ಮುಂದಿನ ಪ್ರಕ್ರಿಯೆ ಮತ್ತು ಅಗತ್ಯ ಸೂಚನೆಗಳನ್ನು ಸರ್ಕಾರ ನೀಡಲಿದೆ ಎಂದು ವಿವರಿಸಿದರು.
ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮಾರಾಠಾವಾಡ ಪ್ರದೇಶದಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಹಲವು ಮನೆಗಳಿಗೆ ಹಾನಿಯಾಗಿದ್ದು, ಅಪಾರ ಪ್ರಮಾಣದಲ್ಲಿ ಬೆಳೆನಷ್ಟ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.