ಪುಣೆ ನಗರ ಮತ್ತು ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ
-ಪಿಟಿಐ ಚಿತ್ರ
ಮುಂಬೈ: ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಭಾರಿ ಮಳೆಯಿಂದಾಗಿ ಕಳೆದ ಆರು ದಿನಗಳಲ್ಲಿ 5,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಧಾರಾಕಾರ ಮಳೆಯಿಂದ ತತ್ತರಿಸಿದ್ದ ಮುಂಬೈ ನಗರವು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಜಲಗಾಂವ್ ಜಿಲ್ಲೆಯ ಎರಾಂಡೋಲ್‌ನ ಕೃಷಿ ಜಮೀನಿನಲ್ಲಿ ಒಂದೇ ಕುಟುಂಬದ ಐವರ ಶವಗಳು ಪತ್ತೆಯಾಗಿವೆ. ಇವರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಮುಂಬೈನಲ್ಲಿ 500ಕ್ಕೂ ಹೆಚ್ಚು, ರಾಯಗಢ 1,332, ಠಾಣೆ 610, ಪಾಲ್ಘರ್ 500, ನಾಂದೇಡ್ 293, ರತ್ನಗಿರಿ 112, ಸತಾರಾ 361, ಪುಣೆ 292 ಮತ್ತು ಸಾಂಗ್ಲಿಯಲ್ಲಿ 471 ಜನರನ್ನು ಬುಧವಾರ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಗಳಾದ ಸಾಂಗ್ಲಿ, ಸತಾರಾ ಮತ್ತು ಕೊಲ್ಲಾಪುರದಲ್ಲಿ ಭಾರಿ ಮಳೆಯಾಗಿದೆ ಎಂದು ವರದಿಯಾಗಿದೆ. ಪುಣೆ ನಗರ ಮತ್ತು ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಭಾರಿ ಮಳೆಯಿಂದಾಗಿ ತೀವ್ರ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.