ADVERTISEMENT

ಮಹಾರಾಷ್ಟ್ರದಲ್ಲಿ ಮಾಸ್ಕ್ ಕಡ್ಡಾಯವಲ್ಲ; ಶನಿವಾರದಿಂದ ಕೋವಿಡ್ ನಿರ್ಬಂಧಗಳ ತೆರವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮಾರ್ಚ್ 2022, 13:42 IST
Last Updated 31 ಮಾರ್ಚ್ 2022, 13:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ರಾಜ್ಯದಲ್ಲಿ ಕೋವಿಡ್–19 ಸಂಬಂಧಿತ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸಲು ಮಹಾರಾಷ್ಟ್ರ ಸಂಪುಟದಲ್ಲಿ ಗುರುವಾರ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಏಪ್ರಿಲ್‌ 2ರಿಂದಲೇ ನಿರ್ಬಂಧಗಳ ತೆರವು ಅನ್ವಯವಾಗಲಿದೆ.

ಮಹಾರಾಷ್ಟ್ರದಲ್ಲಿ ಕೋವಿಡ್‌–19 ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಸಾಂಕ್ರಾಮಿಕ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಗಳನ್ನು ಏಪ್ರಿಲ್‌ 2ರಿಂದ ಹಿಂಪಡೆಯಲು ಮುಖ್ಯಮಂತ್ರಿ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಾಗಿ ಆರೋಗ್ಯ ಸಚಿವ ರಾಜೇಶ್‌ ಟೋಪೆ ಹೇಳಿದ್ದಾರೆ.

24 ಗಂಟೆಗಳ ಅಂತರದಲ್ಲಿ ರಾಜ್ಯದಲ್ಲಿ ಕೋವಿಡ್‌ ದೃಢಪಟ್ಟ 183 ಹೊಸ ಪ್ರಕರಣಗಳು ದಾಖಲಾಗಿವೆ.

ADVERTISEMENT

ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು ಹಾಗೂ ಮುಂಬೈ ಲೋಕಲ್‌ ಟ್ರೈನ್‌ಗಳಲ್ಲಿ ಸಂಚರಿಸುವವರು ಎರಡು ಡೋಸ್‌ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವ ಕ್ರಮಗಳನ್ನು ಸಡಿಲಗೊಳಿಸಲಾಗಿದೆ.

'ನಿರ್ಬಂಧಗಳು ಹಿಂಪಡೆಯುವುದರಿಂದ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬಾರದು ಎಂದು ಅರ್ಥವಲ್ಲ' ಎಂದು ರಾಜೇಶ್‌ ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಕೊರೊನಾ ವೈರಸ್‌ ಸಾಂಕ್ರಾಮಿಕವಾಗುವುದನ್ನು ತಡೆಯಲು ಜನರು ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಹಾಗೂ ಲಸಿಕೆ ಹಾಕಿಸಿಕೊಳ್ಳುವಂತೆ ಮಹಾರಾಷ್ಟ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.