ADVERTISEMENT

ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್‌ಗೆ ಮಮತಾ ಅಭಿನಂದನೆ

ಪಿಟಿಐ
Published 9 ಆಗಸ್ಟ್ 2024, 11:07 IST
Last Updated 9 ಆಗಸ್ಟ್ 2024, 11:07 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರದ ಅಧಿಕಾರ ವಹಿಸಿಕೊಂಡಿರುವ ಆರ್ಥಿಕ ತಜ್ಞ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿನಂದಿಸಿದ್ದಾರೆ.

‘ಪ್ರೊ. ಮೊಹಮ್ಮದ್ ಯೂನಸ್ ಮತ್ತು ಅವರ ಸಂಪುಟದ ಸಲಹೆಗಾರರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಎಲ್ಲ ಸದಸ್ಯರಿಗೂ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳು. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಮತ್ತಷ್ಟು ಸುಧಾರಿಸುತ್ತದೆ ಎಂಬ ಆಶಾಭಾವ ನನಗಿದೆ’ ಎಂದು ಮಮತಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ಶೀಘ್ರದಲ್ಲೇ ಕೊನೆಗೊಳ್ಳುತ್ತದೆ. ಜತೆಗೆ, ಶಾಂತಿ ಮರುಸ್ಥಾಪನೆಯಾಗುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ನೆರೆಯ ದೇಶವು ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ನಮಗೂ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ’ ಎಂದು ಮಮತಾ ತಿಳಿಸಿದ್ದಾರೆ.

ADVERTISEMENT

ಮೀಸಲಾತಿ ನೀತಿ ವಿರೋಧಿಸಿ ದೇಶದಾದ್ಯಂತ ನಡೆದ ಹಿಂಸಾಚಾರದ ಬೆನ್ನಲ್ಲೇ, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶೇಖ್‌ ಹಸೀನಾ ಅವರು ದೇಶ ತೊರೆದಿದ್ದರು. ಬಳಿಕ ಯೂನಸ್‌ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಲಾಗಿತ್ತು.

ಬಾಂಗ್ಲಾದೇಶದ ಅಧ್ಯಕ್ಷರ ‘ವಂಗಭವನ’ದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ 84 ವರ್ಷದ ಮೊಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

‘ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತೇನೆ ಮತ್ತು ರಕ್ಷಿಸುತ್ತೇನೆ’ ಎಂದು ಯೂನಸ್‌ ಸಮಾರಂಭದಲ್ಲಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.