ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ
ಕೋಲ್ಕತ್ತ: ಪಶ್ಚಿಮ ಬರ್ದ್‌ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಈ ಪ್ರಕರಣವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಆದರೆ, ‘ಯುವತಿಯರು ರಾತ್ರಿ ಹೊತ್ತು ಹೊರಗೆ ಹೋಗಬಾರದು. ಇದ್ದಲ್ಲೇ ಇದ್ದು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು’ ಎಂದು ಹೇಳಿಕೆ ನೀಡಿರುವುದು ಇದೀಗ ವಿವಾದಕ್ಕೀಡಾಗಿದೆ.
‘ಇದು ಖಾಸಗಿ ಕಾಲೇಜು. ಆ ಯುವತಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಳು. ಮಧ್ಯರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ನನಗೆ ತಿಳಿದಿರುವಂತೆ, ಘಟನೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಏನಾಯಿತು ಎಂದು ನನಗೆ ತಿಳಿದಿಲ್ಲ. ತನಿಖೆ ನಡೆಯುತ್ತಿದೆ. ಘಟನೆಯನ್ನು ನೋಡಿ ನನಗೆ ಆಘಾತವಾಗಿದೆ. ಆದರೆ, ಖಾಸಗಿ ವೈದ್ಯಕೀಯ ಕಾಲೇಜುಗಳು ಸಹ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ವಹಿಸಬೇಕು’ ಎಂದು ಮಮತಾ ಹೇಳಿದ್ದಾರೆ.
‘ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಯಾರನ್ನೂ ಕ್ಷಮಿಸುವುದಿಲ್ಲ... ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ’ ಎಂದು ಮಮತಾ ಹೇಳಿದ್ದಾರೆ.
‘ಮಣಿಪುರ, ಉತ್ತರ ಪ್ರದೇಶ, ಬಿಹಾರ, ಒಡಿಶಾದಲ್ಲಿಯೂ ಇಂತಹ ಘಟನೆಗಳು ನಡೆದಿವೆ. ಅಲ್ಲಿನ ಸರ್ಕಾರಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾನು ಒತ್ತಾಯಿಸುತ್ತೇನೆ. ನಮ್ಮ ರಾಜ್ಯದಲ್ಲಿ ಇಂತಹ ಪ್ರಕರಣಗಳು ಸಂಭವಿಸಿದಾಗ ನಾವು 1-2 ತಿಂಗಳೊಳಗೆ ಆರೋಪಿಗಳು ವಿರುದ್ಧ ಚಾರ್ಜ್‌ಶೀಟ್ ಹಾಕಿದ್ದೇವೆ. ಕೆಳ ಹಂತದ ನ್ಯಾಯಾಲಯವು ಆರೋಪಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಿತ್ತು’ ಎಂದು ಮಮತಾ ವಿವರಿಸಿದ್ದಾರೆ.
ಮೂರು ವಾರಗಳ ಹಿಂದೆ ಒಡಿಶಾದ ಬೀಚ್‌ನಲ್ಲಿ ಮೂವರು ಹುಡುಗಿಯರ ಮೇಲೆ ಅತ್ಯಾಚಾರ ನಡೆದಿತ್ತು. ಒಡಿಶಾ ಸರ್ಕಾರ ಏನು ಕ್ರಮ ಕೈಗೊಳ್ಳುತ್ತಿದೆ ಎಂದು ಮಮತಾ ಪ್ರಶ್ನಿಸಿದ್ದಾರೆ.
ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.
ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.