
ಮಮತಾ ಬ್ಯಾನರ್ಜಿ
ಕೋಲ್ಕತ್ತ: ಬೆಂಗಾಲಿ ಭಾಷೆಯಲ್ಲಿ ಮಾತನಾಡಿದ್ದಕ್ಕೆ 24 ವರ್ಷದ ವಲಸೆ ಕಾರ್ಮಿಕನನ್ನು ಮಹಾರಾಷ್ಟ್ರದಲ್ಲಿ ಹತ್ಯೆ ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು ‘ಕೃತ್ಯವು ದ್ವೇಷ ಅಪರಾಧವಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ.
'ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿರುವ ಬಂದ್ವಾನದ ನಿವಾಸಿ, ಸುಖೇನ್ ಮೆಹ್ತಾ ಅವರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಹತ್ಯೆ ಮಾಡಲಾಗಿದೆ. ಇದರಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ' ಎಂದಿದ್ದಾರೆ.
ಫೆ.9ರಂದು ತಡರಾತ್ರಿ ಸುಖೇನ್ ಹತ್ಯೆಯಾಗಿದೆ. ಸ್ಥಳೀಯ ಕೈಗಾರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಖೇನ್, ಅಂದು ಕೆಲಸಕ್ಕೆ ಹೋಗಿರಲಿಲ್ಲ. ಮದ್ಯ ಕುಡಿದಿದ್ದ ಆತ ಕೋರೆಗಾಂವ್‌ನಲ್ಲಿ ಇಬ್ಬರೊಂದಿಗೆ ಜಗಳವಾಡಿದ್ದಾನೆ. ಆ ವ್ಯಕ್ತಿಗಳು ಸುಖೇನ್‌ನನ್ನು ಹತ್ಯೆ ಮಾಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.