ಇಂಫಾಲ್: ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಉನ್ನತ ಅಧಿಕಾರಿಗಳು, ಮಾಜಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಸೇರಿದಂತೆ ಹಲವು ಬಿಜೆಪಿ ಶಾಸಕರ ಜೊತೆ ರಾಜಭವನದಲ್ಲಿ ಭಾನುವಾರ ಸಭೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ಎರಡನೇ ವಾರದಲ್ಲಿ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯ ಕಾರಣ ಈ ಸಭೆಯು ಮಹತ್ವ ಪಡೆದಿದೆ.
ಮುಖ್ಯ ಕಾರ್ಯದರ್ಶಿ ಪುನೀತ್ ಕುಮಾರ್ ಗೋಯೆಲ್, ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಮತ್ತು ಪೊಲೀಸ್ ಮಹಾನಿರ್ದೇಶಕ ರಾಜೀವ್ ಸಿಂಗ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಅವರು ತಿಳಿಸಿದರು.
ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 13ರಂದು ಮಿಜೋರಾಂಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.
ಮಣಿಪುರದಲ್ಲಿ 2023ರ ಮೇ ತಿಂಗಳಿನಿಂದ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಪರಿಣಾಮವಾಗಿ 260ಕ್ಕೂ ಹೆಚ್ಚು ಮಂದಿ ಹತ್ಯೆಗೀಡಾಗಿದ್ದಾರೆ ಮತ್ತು ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.