ADVERTISEMENT

ಜನಾಂಗೀಯ ಹಿಂಸಾಚಾರ: ವಿವರ ನೀಡುವಂತೆ ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2024, 14:17 IST
Last Updated 9 ಡಿಸೆಂಬರ್ 2024, 14:17 IST
supreme-court-
supreme-court-   

ನವದೆಹಲಿ: ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಬೆಂಕಿಗೆ ಪೂರ್ಣ ಅಥವಾ ಭಾಗಶಃ ಆಹುತಿಯಾದ, ಅತಿಕ್ರಮಣಕ್ಕೆ ಗುರಿಯಾದ ವಾಸದ ಕಟ್ಟಡಗಳು, ಆಸ್ತಿಗಳ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವಂತೆ ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಸೂಚನೆ ನೀಡಿದೆ.

ತಪ್ಪು ಮಾಡಿದವರು ಹಾಗೂ ಅತಿಕ್ರಮಣ ನಡೆಸಿದವರ ವಿರುದ್ಧ ಕೈಗೊಂಡ ಕ್ರಮಗಳನ್ನು ವಿವರಿಸುವಂತೆಯೂ ಸರ್ಕಾರಕ್ಕೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರು ಇರುವ ವಿಭಾಗೀಯ ಪೀಠವು, ಮುಂದಿನ ವಿಚಾರಣೆಯನ್ನು ಜನವರಿ 20ರ ನಂತರದ ವಾರಕ್ಕೆ ನಿಗದಿ ಮಾಡಿದೆ.

ಸಂತ್ರಸ್ತರಿಗೆ ಪರಿಹಾರ ನೀಡುವ ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯದ ಉಸ್ತುವಾರಿಗೆ ಹೈಕೋರ್ಟ್‌ ಮೂವರು ನಿವೃತ್ತ ಮಹಿಳಾ ನ್ಯಾಯಮೂರ್ತಿಗಳ ಸಮಿತಿಯೊಂದನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ ಕಳೆದ ವರ್ಷದ ಆಗಸ್ಟ್‌ನಲ್ಲಿ ಆದೇಶಿಸಿತ್ತು. ಅಲ್ಲದೆ, ಕ್ರಿಮಿನಲ್ ಪ್ರಕರಣಗಳ ತನಿಖೆಯ ಮೇಲೆ ನಿಗಾ ಇರಿಸುವಂತೆ ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥ ದತ್ತಾತ್ರೇಯ ಪಡಸಲಗೀಕರ್ ಅವರಿಗೆ ಸೂಚನೆ ನೀಡಿತ್ತು.

ADVERTISEMENT

ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾದ ನಂತರದಲ್ಲಿ 160ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.