ADVERTISEMENT

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ ನಾಯಕರು

​ಪ್ರಜಾವಾಣಿ ವಾರ್ತೆ
Published 11 ಮೇ 2020, 5:11 IST
Last Updated 11 ಮೇ 2020, 5:11 IST
ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌
ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌   

ನವದೆಹಲಿ: ಹೃದ್ರೋಗ ಸಮಸ್ಯೆ ಹಿನ್ನೆಲೆಯಲ್ಲಿ ಭಾನುವಾರ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಗಣ್ಯ ನಾಯಕರು ಪ್ರಾರ್ಥಿಸಿದ್ದಾರೆ.

ಭಾರತವು ನಮ್ಮ ಮಾಜಿ ಪ್ರಧಾನಿ ಸಲುವಾಗಿ ಪ್ರಾರ್ಥಿಸುತ್ತಿದೆ ಎಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, 'ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯದ ಬಗ್ಗೆ ನಮಗೆ ತೀವ್ರ ಕಾಳಜಿ ಇದೆ. ಅವರು ಶೀಘ್ರದಲ್ಲೇ ಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆಂದು ನಾವು ಭಾವಿಸುತ್ತೇವೆ. ಭಾರತವು ನಮ್ಮ ಮಾಜಿ ಪ್ರಧಾನಿ ಸಲುವಾಗಿ ಪ್ರಾರ್ಥಿಸುತ್ತಿದೆ' ಎಂದು ಟ್ವೀಟ್‌ ಮಾಡಿದ್ದಾರೆ.

ಮಾಜಿ ಪ್ರಧಾನಿ ಅವರ ಉತ್ತರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, 'ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ ಎಂದು ತಿಳಿದು ತುಂಬಾ ಚಿಂತಿತನಾಗಿದ್ದೇನೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ ಮತ್ತು ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ.

ADVERTISEMENT

ಮನಮೋಹನ್‌ ಸಿಂಗ್‌ ಅವರ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಿಪಡಿಸಿರುವ ಕರ್ನಾಟಕ ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌, 'ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯದ ಬಗ್ಗೆ ತೀವ್ರ ಕಾಳಜಿ ಇದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಒಂದು ಶತಕೋಟಿಗೂ ಹೆಚ್ಚು ಭಾರತೀಯರೊಂದಿಗೆ ನಾನೂ ಸಹ ಬಯಸುತ್ತೇನೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿರುವ ಹಿರಿಯ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌, 'ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ ಎಂಬ ವರದಿಗಳಿಂದ ತೀವ್ರ ಕಳವಳವಾಗಿದೆ. ಆದರೆ, ಅವರು ಐಸಿಯುನಲ್ಲಿಲ್ಲ ಮತ್ತು ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ಕೇಳಿ ಸಮಾಧಾನವಾಗಿದೆ. ಅವರು ಶೀಘ್ರ ಮತ್ತು ಸಂಪೂರ್ಣ ಚೇತರಿಯಾಗಲಿ' ಎಂದು ಟ್ವೀಟ್ ಮಾಡಿದ್ದಾರೆ.

ಡಾ. ಮನಮೋಹನ್ ಸಿಂಗ್ ಅವರ ಶೀಘ್ರ ಚೇತರಿಕೆಗಾಗಿ ನಾವೆಲ್ಲರೂ ಪ್ರಾರ್ಥಿಸುತ್ತೇವೆ ಎಂದಿರುವ ಶಿವಸೇನಾ ಯುವ ಮುಖಂಡ,'ಡಾ. ಮನಮೋಹನ್‌ ಸಿಂಗ್‌ ಅವರು ಶೀಘ್ರದಲ್ಲೇ ಮನೆಗೆ ಬರುತ್ತಾರೆ ಮತ್ತು ಆರ್ಥಿಕತೆಯ ಚೇತರಿಕೆಗೆ ಸಹಾಯ ಮಾಡುತ್ತಾರೆಂದು ನಾವು ಭಾವಿಸುತ್ತೇವೆ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.