ಅಣ್ಣಾ ಹಜಾರೆ
ಪಿಟಿಐ ಚಿತ್ರ
ಮುಂಬೈ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಸಂತಾಪ ಸೂಚಿಸಿದ್ದಾರೆ. ದೇಶ ಮತ್ತು ಸಮಾಜದ ಅಭಿವೃದ್ದಿಗಾಗಿ ಶ್ರಮಿಸಿದ ಸಿಂಗ್, ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿದ್ದರು ಎಂದು ಸ್ಮರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಟ್ಟುವವರು ಸಾಯಲೇಬೇಕು. ಆದರೆ ಸಿಂಗ್ ಮಾಡಿದ ಕೆಲಸಗಳು ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳು ಅಪಾರ. ಅವರ ಪರಂಪರೆಯು ಸದಾ ನೆನಪಿಸಿಕೊಳ್ಳುವಂತಹದ್ದು. ಅವರು ದೇಶದ ಆರ್ಥಿಕತೆಗೆ ಹೊಸ ದಿಕ್ಕನ್ನು ನೀಡಿದರು ಎಂದು ಹೇಳಿದ್ದಾರೆ.
2010ರ ದಶಕದಲ್ಲಿ ಸಿಂಗ್ ಅವರ ಅಧಿಕಾರಾವಧಿಯಲ್ಲಿ ನಾನು (ಹಜಾರೆ) ಅವರನ್ನು ಭೇಟಿ ಮಾಡಿದ್ದೆ. ಭ್ರಷ್ಟಾಚಾರ ವಿರುದ್ಧದ ಆಂದೋಲನದ ಸಮಯದಲ್ಲಿ ನನ್ನ ಜತೆ ಚರ್ಚಿಸಿದರು. ಭ್ರಷ್ಟಾಚಾರ ವಿರುದ್ಧದ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದಂತೆ ಕೆಲವು ನಿರ್ಧಾರಗಳನ್ನು ತ್ವರಿತವಾಗಿ ತೆಗೆದುಕೊಂಡರು ಎಂದು ಹಜಾರೆ ತಿಳಿಸಿದ್ದಾರೆ.
2004 ರಿಂದ 2014ರವರೆಗೆ ಪ್ರಧಾನಿಯಾಗಿದ್ದ ಸಿಂಗ್ ಅವರು ದೇಶದ ಆರ್ಥಿಕತೆಗೆ ಹೊಸ ದಿಕ್ಕನ್ನು ನೀಡಿದರು. ಸಿಂಗ್ ಅವರು ಇಂದು ನಮ್ಮೊಂದಿಗೆ ಭೌತಿಕವಾಗಿ ಇಲ್ಲ. ಆದರೆ ಅವರ ನೆನಪುಗಳು ಸದಾ ನಮ್ಮೊಂದಿಗೆ ಇರುತ್ತದೆ ಎಂದು ಹಜಾರೆ ಸ್ಮರಿಸಿದ್ದಾರೆ.
ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ಗುರುವಾರ ನಿಧನರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.