ಸಾಂದರ್ಭಿಕ ಚಿತ್ರ
ಭೋಪಾಲ್: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಿಂತಿದ್ದ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಮೂವರು ಮಹಿಳೆಯರು ಸೇರಿ ಆರು ಜನರು ಮೃತಪಟ್ಟಿದ್ದಾರೆ. ಸುಮಾರು 20 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು (ಮಂಗಳವಾರ) ಮುಂಜಾನೆ ಭಿಂಡ್ ಜಿಲ್ಲೆಯ ಜವಾಹರಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಜನರು ವ್ಯಾನ್‌ನಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಸಂಭವಿಸಿದ ವೇಳೆ ವ್ಯಾನ್‌ನಲ್ಲಿ ಕೆಲವರು ಕುಳಿತಿದ್ದರು ಮತ್ತು ಮತ್ತೆ ಕೆಲವರು ರಸ್ತೆ ಬದಿ ನಿಂತಿದ್ದರು. ಆರು ಮಂದಿ ಪೈಕಿ ಮೂವರು ಸ್ಥಳದಲ್ಲಿಯೇ ಮೃತಪಟ್ಟರೆ, ಇನ್ನಿಬ್ಬರು ನಂತರ ಸಾವಿಗೀಡಾಗಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ವೇಗವಾಗಿ ಬಂದ ಟ್ರಕ್ ಸೈಕಲ್ ಅನ್ನು ತಪ್ಪಿಸಲು ಪ್ರಯತ್ನಿಸುವ ವೇಳೆ ನಿಂತಿದ್ದ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಸಂಬಂಧ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು, ಮೃತಪಟ್ಟ ಕುಟುಂಬಗಳಿಗೆ ತಲಾ ₹4 ಲಕ್ಷ ಹಾಗೂ ಗಂಭೀರ ಗಾಯಗೊಂಡಿರುವವರಿಗೆ ತಲಾ ₹1 ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾಗಿರುವವರಿಗೆ ತಲಾ ₹50,000 ಪರಿಹಾರ ಘೋಷಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.