ADVERTISEMENT

ದೆಹಲಿ: ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ– 14 ಜನರ ಬಂಧನ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 7:36 IST
Last Updated 17 ಏಪ್ರಿಲ್ 2022, 7:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಾಯವ್ಯ ಭಾಗದ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿಯ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ 14 ಜನರನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಸಂಜೆ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಕಲ್ಲುತೂರಾಟ ನಡೆದಿದ್ದು, ಉದ್ರಿಕ್ತರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹಿಂಸಾಚಾರದ ವೇಳೆ ಪೊಲೀಸ್ ಅಧಿಕಾರಿಯೊಬ್ಬರಿಗೆ ಗುಂಡೇಟು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 120ಬಿ (ಕ್ರಿಮಿನಲ್ ಪಿತೂರಿ), 147(ಗಲಭೆ) ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಘಟನೆಯಲ್ಲಿ 8 ಜನರ ಪೊಲೀಸರು ಸೇರಿದಂತೆ 9 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಉಪ ಕಮಿಷನರ್ ಉಷಾ ರಂಗಾನಿ ತಿಳಿಸಿದ್ದಾರೆ.

ADVERTISEMENT

ಘಟನೆ ಸಂಬಂಧ ಮೊದಲಿಗೆ 9 ಜನರನ್ನು ಬಂಧಿಸಲಾಗಿತ್ತು. ಬಳಿಕ ಮತ್ತೆ ಐವರನ್ನು ಬಂಧಿಸಲಾಗಿದೆ. ಗಾಯಾಳುಗಳಿಗೆ ಬಾಬು ಜಗಜೀವನ್ ರಾಮ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಭಾನುವಾರ ಮುಂಜಾನೆ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಕ್ಷಿಪ್ರ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.

ಹಿಂಸಾಚಾರದಲ್ಲಿ ಭಾಗಿಯಾದವರನ್ನು ಪತ್ತೆಹಚ್ಚಲು ಡ್ರೋನ್‌ಗಳು ಮತ್ತು ಮುಖವನ್ನು ಗುರುತಿಸುವ ಸಾಫ್ಟ್‌ವೇರ್‌ಗಳನ್ನು ಬಳಸಲಾಗುತ್ತಿದೆ. ಎಲ್ಲಾ ಮೊಬೈಲ್ ದೃಶ್ಯಾವಳಿ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಹನುಮ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಶೋಭಾ ಯಾತ್ರೆಯಲ್ಲಿ ಶನಿವಾರ ಸಂಜೆ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ನಡೆದ ಕಲ್ಲುತೂರಾಟದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು. ಉದ್ರಿಕ್ತರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.