ADVERTISEMENT

ಜಮ್ಮು ಚುನಾವಣೆಗೆ ಆಯೋಗದ ಬದಲು 'ಸುಪ್ರೀಂ' ನಿರ್ದೇಶನ ನಾಚಿಕೆಗೇಡಿನ ಸಂಗತಿ: ಒಮರ್

ಪಿಟಿಐ
Published 25 ಫೆಬ್ರುವರಿ 2024, 5:15 IST
Last Updated 25 ಫೆಬ್ರುವರಿ 2024, 5:15 IST
ಒಮರ್‌ ಅಬ್ದುಲ್ಲಾ
ಒಮರ್‌ ಅಬ್ದುಲ್ಲಾ   

ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ದೇಶನ ನೀಡುವ ಬದಲು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಬೇಕಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಸಮಸ್ಯಗಳಿಗೆ 370ನೇ ವಿಧಿ ಮೂಲವಾಗಿದೆ ಎಂಬ ಅಭಿಪ್ರಾಯ ಸರಿಯಲ್ಲ. ಈ ಹಿಂದೆ ಭಯೋತ್ಪಾದನೆ ಮುಕ್ತವಾಗಿದ್ದ ಪ್ರದೇಶಗಳಲ್ಲಿ, ವಿಶೇಷವಾಗಿ ಜಮ್ಮು, ರಜೌರಿ ಹಾಗೂ ಪೂಂಚ್‌ ಕಣಿವೆಗಳಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗಿ ವರದಿಯಾಗುತ್ತಿವೆ ಎಂದು ಅವರು ಹೇಳಿದ್ದಾರೆ.

ಎಬಿಪಿ ನೆಟ್‌ವರ್ಕ್‌ನ ‘ಭಾರತದ ಕಲ್ಪನೆಗಳು’ ಶೃಂಗಸಭೆ 3.0ನಲ್ಲಿ ಮಾತನಾಡಿದ ಅವರು, ‘ಕೇಂದ್ರಾಡಳಿತ ಪ್ರದೇಶದಲ್ಲಿ ಈ ಹಿಂದೆ ಇದ್ದ ಸರ್ಕಾರಕ್ಕಿಂತ, ಈಗಿನ ಕೇಂದ್ರ ಸರ್ಕಾರದ ಅಡಿಯಲ್ಲಿ ಹೆಚ್ಚು ಕಾಶ್ಮೀರಿ ಪಂಡಿತರು ಕಣಿವೆಯಲ್ಲಿ ನಡೆದ ದಾಳಿಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

2024ರ ಸೆಪ್ಟೆಂಬರ್‌ ಅಂತ್ಯದೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ನ್ಯಾಯಾಲಯ ನಿಗದಿಪಡಿಸಿರುವ ಗಡುವಿನ ಕುರಿತು ಬಿಜೆಪಿ ಹಾಗೂ ಭಾರತ ಸರ್ಕಾರ ಏನು ಮಾಡಲು ಹೊರಟಿದೆ ಎಂದು ಒಮರ್ ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ 2019ರಲ್ಲಿ ರದ್ದುಗೊಳಿಸಿತ್ತು. ಕೇಂದ್ರದ ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿತ್ತು. ಜತೆಗೆ, ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸ್ಥಾಪಿಸುವಂತೆ ಹಾಗೂ 2024ರ ಸೆಪ್ಟೆಂಬರ್‌ 30ರೊಳಗೆ ವಿಧಾನಸಭೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.