ADVERTISEMENT

ವಿವಾದಿತ ಕೃಷಿ ಕಾಯ್ದೆ ಹಿಂಪಡೆಯುವಂತೆ ಕೇಂದ್ರಕ್ಕೆ ಮಾಯಾವತಿ ಮನವಿ

ಏಜೆನ್ಸೀಸ್
Published 25 ಜನವರಿ 2021, 11:57 IST
Last Updated 25 ಜನವರಿ 2021, 11:57 IST
ಉತ್ತರ ಪ್ರದೇಶದ ನಾಲ್ಕು ಬಾರಿಯ ಮಾಜಿ ಮುಖ್ಯಮಂತ್ರಿ ಮಾಯಾವತಿ
ಉತ್ತರ ಪ್ರದೇಶದ ನಾಲ್ಕು ಬಾರಿಯ ಮಾಜಿ ಮುಖ್ಯಮಂತ್ರಿ ಮಾಯಾವತಿ   

ನವದೆಹಲಿ: ಗಣರಾಜ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಖಾತ್ರಿಪಡಿಸಲು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಹುಜನ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆಮಾಯಾವತಿ ಸೋಮವಾರ ಮನವಿ ಮಾಡಿದ್ದಾರೆ.

ಗಣರಾಜೋತ್ಸವ ದಿನಾಚರಣೆಯಂದು ರೈತರು, ಬೃಹತ್ ಟ್ರ್ಯಾಕ್ಟರ್ ಪರೇಡ್‌ಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, ಅಂದೋಲನ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಳ್ಳುವಂತೆ ಬಿಎಸ್‌ಪಿ ಮತ್ತೊಮ್ಮೆ ವಿನಂತಿ ಮಾಡುತ್ತಿದೆ. ಗಣರಾಜ್ಯೋತ್ಸವ ದಿನಾಚರಣೆಯಂದು ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಹೇಳಿದರು.

ADVERTISEMENT

ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ಕಳೆದ ಎರಡು ತಿಂಗಳಿಗಿಂತಲೂ ಹೆಚ್ಚು ಸಮಯದಿಂದ ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಶುಕ್ರವಾರ ನಡೆದ 11ನೇ ಸುತ್ತಿನ ಮಾತುಕತೆಯಲ್ಲೂ ಯಾವುದೇ ಫಲ ಕಾಣಲಿಲ್ಲ.

ಗಣರಾಜ್ಯೋತ್ಸವ ಪರೇಡ್ ಮುಗಿದ ಬಳಿಕ ದೆಹಲಿ ಪ್ರವೇಶಿಸಲಿರುವ ರೈತರು, ಬೃಹತ್ ಟ್ರ್ಯಾಕ್ಟರ್ ಪರೇಡ್‌ನಲ್ಲಿ ಭಾಗವಹಿಸಲಿದ್ದಾರೆ. ರೈತರ ಟ್ರ್ಯಾಕ್ಟರ್ ಜಾಥಾದಲ್ಲಿ ಹಳ್ಳಿಯ ಜೀವನ, ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ ಮತ್ತು ಧೈರ್ಯವನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳ ಅನಾವರಣವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.