ADVERTISEMENT

ಮಾಧ್ಯಮದ ಮೇಲೆ ದೇಶದ್ರೋಹ ಪ್ರಕರಣ: ‘ಸುಪ್ರೀಂ’ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 31 ಮೇ 2021, 19:08 IST
Last Updated 31 ಮೇ 2021, 19:08 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಮಾಧ್ಯಮದ ವಿರುದ್ಧ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವ ಪ್ರವೃತ್ತಿ ಹೆಚ್ಚಳವಾಗಿರುವುದಕ್ಕೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಚಂದ್ರಚೂಡ್‌ ಅವರು ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೋವಿಡ್‌ನಿಂದ ಮೃತರಾದವರ ಶವಗಳನ್ನುನದಿಗಳಿಗೆ ಎಸೆಯುವ ದೃಶ್ಯಗಳನ್ನು ಪ್ರಸಾರ ಮಾಡಿದ ಸುದ್ದಿ ವಾಹಿನಿಗಳ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

‘ನದಿಗೆ ಶವ ಎಸೆಯುವ ವಿಡಿಯೊವನ್ನು ನಾವು ಗಮನಿಸಿದ್ದೇವೆ. ಇದನ್ನು ತೋರಿಸಿದ ಸುದ್ದಿ ವಾಹಿನಿ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆಯೇ ಎಂದು ಗೊತ್ತಿಲ್ಲ’ ಎಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಚಾಟಿ ಬೀಸಿದರು.

ಕೋವಿಡ್‌ನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಸಂಸ್ಕಾರ ಮಾಡುವ ವಿಚಾರವು ನ್ಯಾಯಪೀಠದ ಎದುರು ಪ್ರಸ್ತಾಪವಾದಾಗ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ADVERTISEMENT

ಸರ್ಕಾರವು ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸುವವರ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ ಸಂಬಂಧಿತ ಸಮಸ್ಯೆಗಳಿಗೆ ನೆರವು ಕೇಳುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿದ್ದ ವಿಚಾರಗಳನ್ನು ಕೋರ್ಟ್ ಈ ಮೊದಲು ಗಂಭೀರವಾಗಿ ಪರಿಗಣಿಸಿತ್ತು. ಅದನ್ನು ಮುಂದುವರಿಸಿದರೆ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿಯೂ ಎಚ್ಚರಿಸಿತ್ತು.

ಅಗತ್ಯ ಔಷಧಿಗಳು, ಲಸಿಕೆ ಮತ್ತು ವೈದ್ಯಕೀಯ ಆಮ್ಲಜನಕ ಪೂರೈಕೆ ಕುರಿತು ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸುತ್ತಿರುವ ಪೀಠದ ಎದುರು ಅಮಿಕಸ್ ಕ್ಯೂರಿ ಆಗಿರುವ ಮೀನಾಕ್ಷಿ ಅರೋರಾ ಅವರು ಮೃತದೇಹಗಳ ಗೌರವಯುತ ಅಂತ್ಯಸಂಸ್ಕಾರ ವಿಚಾರವನ್ನು ಪ್ರಸ್ತಾಪಿಸಿದರು.

‘ಸ್ಮಶಾನ, ಚಿತಾಗಾರಗಳು ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳು. ಆದರೆ ಮೃತಪಟ್ಟವರಿಗೆ ಗೌರವಯುತ ಅಂತ್ಯ ಸಂಸ್ಕಾರ ಸಿಗುತ್ತಿಲ್ಲ. ಹೆಚ್ಚಿನ ಸಂಖ್ಯೆಯ ಚಿತಾಗಾರಗಳು ಕೆಲಸ ಮಾಡುತ್ತಿಲ್ಲ ಎಂಬುದು ದುರ್ದೈವದ ಸಂಗತಿ. ಅಂತ್ಯಸಂಸ್ಕಾರದ ವಿಧಿ ವಿಧಾನಗಳು ವೆಚ್ಚದಾಯಕ ಎಂಬ ಕಾರಣಕ್ಕೆ ಬಡ ಜನರಿಗೆ ಮೃತದೇಹಗಳನ್ನು ವಿಲೇವಾರಿ ಮಾಡಲೂ ಸಾಧ್ಯವಾಗುತ್ತಿಲ್ಲ’ ಎಂದು ಅರೋರಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.