ಮೆಹಬೂಬಾ ಮುಫ್ತಿ ಮತ್ತು ರಾಹುಲ್ ಗಾಂಧಿ
–ಪಿಟಿಐ ಚಿತ್ರಗಳು
ನವದೆಹಲಿ: ದೇಶದಾದ್ಯಂತ ನಡೆಯುತ್ತಿರುವ ಮುಸ್ಲಿಮರ ಮೇಲಿನ ದೌರ್ಜನ್ಯದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವಂತೆ ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ.
ಬಾಂಗ್ಲಾದೇಶಿ ಪ್ರಜೆಗಳು ಮತ್ತು ರೋಹಿಂಗ್ಯಾಗಳನ್ನು ಗುರಿಯಾಗಿಸುವ ನೆಪದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಕೇವಲ ಮಾಧ್ಯಮಗಳ ವರದಿಗಳನ್ನು ಆಧರಿಸಿ ಮುಸ್ಲಿಮರನ್ನು ಭಾರತದಿಂದ ಹೊರಹಾಕುವ ಪ್ರಯತ್ನ ನಡೆಸುತ್ತಿದೆ ಎಂದು ಮುಫ್ತಿ ಆರೋಪಿಸಿದ್ದಾರೆ.
ಪ್ರತಿದಿನವೂ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಂದ ತೀವ್ರವಾಗಿ ವಿಚಲಿತಳಾಗಿದ್ದೇನೆ. ಮುಸ್ಲಿಮರ ಮೇಲಿನ ದೌರ್ಜನ್ಯ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವಂತೆ ಒತ್ತಾಯಿಸಿ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮುಫ್ತಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಕೇಂದ್ರದ ಎನ್‌ಡಿಎ ಸರ್ಕಾರವು ಪಹಲ್ಗಾಮ್ ಉಗ್ರರ ದಾಳಿ, ಆಪರೇಷನ್ ಸಿಂಧೂರ ಕಾರ್ಯಾಚರಣೆ ಸೇರಿದಂತೆ ಇತರ ನಿರ್ಣಾಯಕ ಭದ್ರತಾ ವಿಷಯಗಳು ಚರ್ಚೆಯಲ್ಲಿ ಪ್ರಾಬಲ್ಯ ಸಾಧಿಸುವ ನಿರೀಕ್ಷೆಯಿದ್ದರೂ, ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ದೇಶದಾದ್ಯಂತ ನಡೆಯುತ್ತಿರುವ ಮುಸ್ಲಿಮರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸುವ ನಿರೀಕ್ಷೆ ಇದೆ’ ಎಂದು ಮುಫ್ತಿ ತಿಳಿಸಿದ್ದಾರೆ.
‘ವಿವಿಧ ರಾಜ್ಯಗಳಲ್ಲಿ ಮುಸ್ಲಿಮರ ಸಾವಿರಾರು ಮನೆಗಳನ್ನು ಕೆಡವುತ್ತಿರುವುದು ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಬಿಹಾರದಲ್ಲಿ ನಡೆಸಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಿಂದ (ಎಸ್‌ಐಆರ್) ಮುಸ್ಲಿಮರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ವ್ಯವಸ್ಥಿತ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಮುಫ್ತಿ ದೂರಿದ್ದಾರೆ.
‘ದೇಶ ವಿಭಜನೆ ಸಂದರ್ಭದಲ್ಲಿ ಭಾರತದಲ್ಲಿ ಉಳಿಯಲು ಬಯಸಿದ್ದ ಮುಸ್ಲಿಮರು ಮಹಾತ್ಮ ಗಾಂಧೀಜಿ, ಪಂಡಿತ್ ಜವಾಹರಲಾಲ್ ನೆಹರು ಸೇರಿದಂತೆ ಕಾಂಗ್ರೆಸ್ ಪಕ್ಷದ ಜಾತ್ಯತೀತ ನಾಯಕತ್ವದಲ್ಲಿ ನಂಬಿಕೆ ಹೊಂದಿದ್ದರು. ಇಂದು ಆ ಪರಂಪರೆ ಮುಂದುವರಿಸುವ ಮೂಲಕ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿ ನಿಮ್ಮ (ರಾಹುಲ್) ಮೇಲಿದೆ’ ಎಂದು ಮುಫ್ತಿ ಹೇಳಿದ್ದಾರೆ.
‘ಪಾಕಿಸ್ತಾನ ಅಥವಾ ಬಾಂಗ್ಲಾದೇಶದಂತಹ ನೆರೆಯ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳನ್ನು ಗುರಿಯಾಗಿಸಿಕೊಂಡಾಗ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸುತ್ತದೆ. ಆದರೆ, ನಮ್ಮ ದೇಶದೊಳಗೆ ಮುಸ್ಲಿಮರನ್ನು ಗುರಿಯಾಗಿಸಿಕೊಂಡಾಗ ಮಾತ್ರ ಮೌನಕ್ಕೆ ಜಾರುತ್ತದೆ’ ಎಂದೂ ಮುಫ್ತಿ ಗುಡುಗಿದ್ದಾರೆ.
‘ನಿಮ್ಮ ನಾಯಕತ್ವದಲ್ಲಿ (ರಾಹುಲ್) ಹೆಚ್ಚಿನ ಭರವಸೆ ಇಟ್ಟುಕೊಂಡಿದ್ದೇವೆ. ದೇಶದಲ್ಲಿ ನಿರಂತರವಾಗಿ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಅಲ್ಪಸಂಖ್ಯಾತರ ಪರವಾಗಿ ಮಾತನಾಡುವುದನ್ನು ಮುಂದುವರಿಸಬೇಕೆಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.