ADVERTISEMENT

ಮೇಕೆದಾಟು: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2018, 18:42 IST
Last Updated 5 ಡಿಸೆಂಬರ್ 2018, 18:42 IST

ನವದೆಹಲಿ: ಮೇಕೆದಾಟು ಯೋಜನೆಯ ಸಾಧ್ಯತಾ ವರದಿಗೆ ಸಮ್ಮತಿ ಸೂಚಿಸಿರುವ ಕ್ರಮವು ನ್ಯಾಯಾಂಗ ನಿಂದನೆಯಾಗಲಿದೆ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಅರ್ಜಿ ಸಲ್ಲಿಸಿದೆ.

ಕೇಂದ್ರ ಜಲ ಆಯೋಗದ ನಿರ್ದೇಶಕ ಎನ್‌. ಮುಖರ್ಜಿ, ಅಧ್ಯಕ್ಷ ಎಸ್‌. ಮಸೂದ್‌ ಹುಸೇನ್‌, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ್‌ ಗುಂಗೆ, ಕರ್ನಾಟಕ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದ್ದು, ಕಳೆದ ಫೆಬ್ರುವರಿ 16ರಂದು ಕಾವೇರಿ ನದಿ ನೀರು ಹಂಚಿಕೆ ಮಾಡಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದೆ.

ಮುಂದಿನ ವಾರ ವಿಚಾರಣೆ: ಮೇಕೆದಾಟು ಯೋಜನೆ ಕೈಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮುಂದಿನ ವಾರ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ.

ADVERTISEMENT

ಕರ್ನಾಟಕವು ಯೋಜನೆ ಕುರಿತು ಸಲ್ಲಿಸಿದ್ದ ಸಾಧ್ಯತಾ ವರದಿಗೆ ಕೇಂದ್ರದ ಜಲ ಆಯೋಗ (ಸಿಡಬ್ಲ್ಯೂಸಿ) ಸಮ್ಮತಿ ಸೂಚಿಸಿರುವುದು ಕಾವೇರಿ ನದಿ ನೀರು ಹಂಚಿಕೆ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಪರ ವಕೀಲರು ದೂರಿದರು.

ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್‌ ನೇತೃತ್ವದ ಪೀಠವು ಮುಂದಿನ ವಾರ ಈ ಮೇಲ್ಮನವಿಯ ವಿಚಾರಣೆ ನಡೆಸಲಿದೆ ಎಂದು ಬುಧವಾರ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.