ಮನೋಜ್ ಜಾರಂಗೆ
ಮುಂಬೈ: ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಸಚಿವ ಧನಂಜಯ ಮುಂಡೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಸಾಕಾಗುವುದಿಲ್ಲ. ಬದಲಾಗಿ ಅವರ (ಮುಂಡೆ) ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಒತ್ತಾಯಿಸಿದ್ದಾರೆ.
ಸಂತೋಷ್ ದೇಶಮುಖ್ ಹತ್ಯೆಯ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಇದರ ಬೆನ್ನಲ್ಲೇ ಮನೋಜ್ ಜರಾಂಗೆ ಅವರು ಇಂದು (ಮಂಗಳವಾರ) ದೇಶಮುಖ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜರಾಂಗೆ, ‘ಧನಂಜಯ ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಸಾಲದು, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಬೇಕು. ಜತೆಗೆ, ಅವರ ವಿರುದ್ಧವೂ ಕೊಲೆ ಪ್ರಕರಣ ದಾಖಲಿಸಿ ವಿಚಾರಣೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತನ ಹೆಸರು ಕೇಳಿ ಬಂದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ಅವರು ಇಂದು (ಮಂಗಳವಾರ) ರಾಜೀನಾಮೆ ಸಲ್ಲಿಸಿದ್ದಾರೆ.
ದೇಶಮುಖ್ ಕೊಲೆ ಪ್ರಕರಣದಲ್ಲಿ ಧನಂಜಯ ಅವರ ಆಪ್ತ ವಾಲ್ಮಿಕ್ ಕರಾಡ್ ಅವರನ್ನು ಪ್ರಮುಖ ಆರೋಪಿ ಎಂದು ಸಿಐಡಿ ಹೆಸರಿಸಿತ್ತು. ಧನಂಜಯ ಅವರ ರಾಜೀನಾಮೆಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು, ಅದನ್ನು ರಾಜ್ಯಪಾಲರಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.