ADVERTISEMENT

ಬಾರಮುಲ್ಲಾದಲ್ಲಿ ಭದ್ರತಾ ಪಡೆ–ಉಗ್ರರ ನಡುವೆ ಗುಂಡಿನ ಚಕಮಕಿ: ಇಬ್ಬರು ಉಗ್ರರ ಸಾವು

ಸೇನಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 12:28 IST
Last Updated 4 ಸೆಪ್ಟೆಂಬರ್ 2020, 12:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವಿಗೀಡಾಗಿದ್ದು, ಸೇನಾಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

‘ದಕ್ಷಿಣ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದ ಯೆಡಿಪೊರಾದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಭದ್ರತಾ ಪಡೆಗಳು ಸ್ಥಳವನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದರು. ಆಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಇಬ್ಬರು ಉಗ್ರರು ಎನ್‌ಕೌಂಟರ್‌ಗೆ ಬಲಿಯಾದರು’ ಎಂದು ಅವರು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ 26–ಆರ್‌ಆರ್ ಸೈನ್ಯದ ಮೇಜರ್ ಹಾಗೂ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಜರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕಾರ್ಯಾಚರಣೆಯ ಸ್ಥಳದಲ್ಲಿ ಮತ್ತೊಬ್ಬ ಉಗ್ರ ಅಡಗಿಕೊಂಡಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಈ ವರ್ಷದ ಆರಂಭದಿಂದ ಭದ್ರತಾ ಪಡೆಗಳು, ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ 26 ಉನ್ನತ ಕಮಾಂಡರ್‌ಗಳು ಸೇರಿದಂತೆ ಒಟ್ಟು 160ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.