ADVERTISEMENT

ಭೋಪಾಲ: ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, ಅಪಾಯದಿಂದ ಪಾರು

ಪಿಟಿಐ
Published 2 ಜನವರಿ 2022, 11:48 IST
Last Updated 2 ಜನವರಿ 2022, 11:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭೋಪಾಲ: ಮಧ್ಯಪ್ರದೇಶದ ಭೋಪಾಲದಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಅಪಾಯದಿಂದ ಪಾರಾಗಿದ್ದಾಳೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ವ್ಯಕ್ತಿಯೊಬ್ಬರು ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಲಾಯಿತು ಎಂದು ತಿಳಿಸಿದ್ದಾರೆ.

ಶನಿವಾರ ಸಂಜೆ ಬಾಗ್‌ಸೇವಾನಿಯಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಬಳಿಕ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ADVERTISEMENT

ಅಟ್ಟಾಡಿಸಿಕೊಂಡು ಬಂದ ನಾಲ್ಕು ನಾಯಿಗಳು, ಸುಮಾರು ಎರಡರಿಂದ ಮೂರು ವರ್ಷದ ಬಾಲಕಿ ಮೇಲೆ ಏಕಾಏಕಿ ದಾಳಿ ನಡೆಸಿವೆ. ಬಳಿಕ ಕಚ್ಚಿ ಗಾಯಗೊಳಿಸಿವೆ. ಆ ದಾರಿಯಲ್ಲಿ ಬಂದ ವ್ಯಕ್ತಿ, ನಾಯಿಗೆ ಕಲ್ಲು ಎಸೆಯುವ ಮೂಲಕ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕಿಯ ತಲೆ ಹಾಗೂ ಮುಖಕ್ಕೆ ಗಾಯಗಳಾಗಿವೆ. ಆಕೆಯನ್ನು ಹಮಿದಿಯಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಈ ಕುರಿತು ಇದುವರೆಗೆ ಯಾರೂ ದೂರು ದಾಖಲಿಸಿಲ್ಲ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಸಂಜೀವ್ ಚೌಕ್ಸೆ ತಿಳಿಸಿದ್ದಾರೆ.

ಬಾಲಕಿಗೆಸೂಕ್ತ ಚಿಕಿತ್ಸೆ ಒದಗಿಸಲಾಗಿದ್ದು, ಚೇತರಿಸಿಕೊಂಡಿದ್ದಾಳೆ ಎಂದು ಭೋಪಾಲ ಮುನ್ಸಿಪಲ್ ಕಾರ್ಪೋರೇಷನ್ ಕಮಿಷನರ್ ಕೆ.ವಿ.ಎಸ್. ಜೌಧರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.