ADVERTISEMENT

ಸಾಮಾಜಿಕ ನ್ಯಾಯದ ಹೆಸರಿನಲ್ಲಿ ST,SC,OBC ಸಮುದಾಯಗಳಿಗೆ ವಂಚನೆ;RJD ವಿರುದ್ಧ ಮೋದಿ

​ಪ್ರಜಾವಾಣಿ ವಾರ್ತೆ
Published 30 ಮೇ 2025, 10:09 IST
Last Updated 30 ಮೇ 2025, 10:09 IST
<div class="paragraphs"><p>ಬಿಹಾರದಲ್ಲಿ ಮೋದಿ ಮಾತು</p></div>

ಬಿಹಾರದಲ್ಲಿ ಮೋದಿ ಮಾತು

   

ಪಟ್ನಾ: ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ವಂಚಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಆರೋಪಿಸಿದ್ದಾರೆ.

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, ರೋಹ್ತಾಸ್‌ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ADVERTISEMENT

'ರಾಜ್ಯದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಕುಟುಂಬವು ಆಡಳಿತ ನಡೆಸುತ್ತಿದ್ದ ವೇಳೆ ಜನರಿಂದ ಭೂಮಿಯನ್ನು ಕಸಿದುಕೊಂಡಿತ್ತು. ಈ ಪಕ್ಷವು (ಆರ್‌ಜೆಡಿ ) ಎಂದಿಗೂ ಬಡವರ ಸುಧಾರಣೆಯ ಬಗ್ಗೆ ಯೋಚಿಸಲಿಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಬಿಹಾರವಿಲ್ಲದೆ ವಿಕ್ಷಿತ ಭಾರತವನ್ನು ಊಹಿಸಲು ಸಾಧ್ಯವಿಲ್ಲ' ಎಂದು ಮೋದಿ ತಿಳಿಸಿದ್ದಾರೆ.

'ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷದ ನಾಯಕರು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳನ್ನು ವಂಚಿಸಿದ್ದಾರೆ. ಇಂದಿನ ಬಡವರ ದುಃಸ್ಥಿತಿಗೆ ಅವರೇ ಕಾರಣ. ಆದರೆ ಇದೀಗ ಈ ಪಕ್ಷಗಳು ಮತ್ತೆ ಅಧಿಕಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತದೆ' ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಭಾರತೀಯ ಸಶಸ್ತ್ರ ಪಡೆಗಳಲ್ಲಿ ಬಿಹಾರದ ಯುವಕರ ಪಾತ್ರವನ್ನು ಮೋದಿ ಶ್ಲಾಘಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಒಂದು ದಿನದ ಬಳಿಕ ಬಿಹಾರಕ್ಕೆ ಭೇಟಿ ನೀಡಿದ್ದೆ ಮತ್ತು ಅಂದು ನಾನು ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಉಗ್ರರ ನೆಲೆಗಳನ್ನು ನಾಶಪಡಿಸಲಾಗುವುದು ಎಂದು ಭರವಸೆ ನೀಡಿದ್ದೆ. ಆ ಭರವಸೆಯನ್ನು ಈಡೇರಿಸಿದ್ದೇನೆ' ಎಂದು ಮೋದಿ ಹೇಳಿದ್ದಾರೆ.

ಬಿಹಾರಕ್ಕೆ ಬರೋಬ್ಬರಿ 50ನೇ ಬಾರಿ ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಈ ಐತಿಹಾಸಿಕ ಸಾಧನೆ ಮಾಡಿದ ಏಕೈಕ ಪ್ರಧಾನಿ ಎನಿಸಿದ್ದಾರೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್‌ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.

ಭಾರತವು ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್‌. ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.