ಡೆಹ್ರಾಡೂನ್: ಕಲುಷಿತ ಆಹಾರ ಸೇವಿಸಿ 100ಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥರಾಗಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
66 ಮಂದಿಯನ್ನು ಕೊರೊನೇಷನ್ ಆಸ್ಪತ್ರೆಗೆ ಮತ್ತು 44 ಜನರನ್ನು ಡೂನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ತಿಳಿಸಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಕಾರಣ ಹಲವರನ್ನು ಭಾನುವಾರ ರಾತ್ರಿ ಮತ್ತು ಸೋಮವಾರ ಬೆಳಿಗ್ಗೆ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಎಲ್ಲರ ಆರೋಗ್ಯ ಸ್ಥಿತಿ ಸಾಮಾನ್ಯವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಅನಾರೋಗ್ಯಕ್ಕೆ ಕಾರಣವಾದ ಗೋಧಿ ಹಿಟ್ಟನ್ನು ಉತ್ತರ ಪ್ರದೇಶದ ಸಹರಾನ್‌ಪುರದಿಂದ ಸರಬರಾಜು ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಸಹರಾನ್‌ಪುರದ ಮಳಿಗೆಯಿಂದ ಗೋಧಿ ಹಿಟ್ಟು ಖರೀದಿಸಿದ್ದ 22 ಅಂಗಡಿಗಳನ್ನು ಮುಚ್ಚಲಾಗಿದೆ. ಈ ಅಂಗಡಿಗಳಲ್ಲಿ ಎಲ್ಲಾ ಆಹಾರ ಪದಾರ್ಥಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಮಾಲೀಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಜಯ್ ಸಿಂಗ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕೊರೊನೇಷನ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಜತೆಗೆ, ಪ್ರಕರಣವನ್ನು ಕೂಲಂಕಷವಾಗಿ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.