ADVERTISEMENT

ಮಧ್ಯಪ್ರದೇಶ: ಪ್ರವಾಹ ‍ಪರಿಸ್ಥಿತಿ ಸುಧಾರಣೆ, 14,000 ಮಂದಿ ಸ್ಥಳಾಂತರ

ಪಿಟಿಐ
Published 8 ಆಗಸ್ಟ್ 2021, 10:30 IST
Last Updated 8 ಆಗಸ್ಟ್ 2021, 10:30 IST
ಮಧ್ಯಪ್ರದೇಶದ ಗ್ವಾಲಿಯರ್‌– ಚಂಬಲ್‌ ಪ್ರದೇಶದಲ್ಲಿ ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಸಚಿವ ಜೋತಿರಾದಿತ್ಯ ಸಿಂಧಿಯಾ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.
ಮಧ್ಯಪ್ರದೇಶದ ಗ್ವಾಲಿಯರ್‌– ಚಂಬಲ್‌ ಪ್ರದೇಶದಲ್ಲಿ ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಸಚಿವ ಜೋತಿರಾದಿತ್ಯ ಸಿಂಧಿಯಾ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.   

ಭೋಪಾಲ್: ‘ಮಧ್ಯಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಿಸುತ್ತಿದೆ. ಹಾಗಾಗಿ ಭಾನುವಾರ ಯಾವುದೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿಲ್ಲ. ‍ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸುಮಾರು 14,000 ಮಂದಿಯನ್ನು 230 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ರಾಜ್ಯದ ಗೃಹ ಸಚಿವ ನರೋತ್ತಮ್‌ ಮಿಶ್ರಾ ಅವರು ತಿಳಿಸಿದ್ದಾರೆ.

‘ಪ್ರವಾಹದಲ್ಲಿ ಸಿಲುಕಿದ್ದ ಎಲ್ಲರನ್ನೂ ರಕ್ಷಿಸಲಾಗಿದ್ದು, ಅವರನ್ನು ಪರಿಹಾರ ಕೇಂದ್ರಕ್ಕೆ ಕಳುಹಿಸಲಾಗಿದೆ. ಮೊರೆನಾ, ಶಿವಪುರಿ, ಅಶೋಕ ನಗರ ಮತ್ತು ಶಿಯೋಪುರ್ ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗುವ ಸಾಧ್ಯತೆಗಳಿವೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ’ ಎಂದು ಮಿಶ್ರಾ ಅವರು ವರದಿಗಾರರಿಗೆ ತಿಳಿಸಿದರು.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂಧಿಯಾ ಅವರು ಭಾನುವಾರ ಬೆಳಿಗ್ಗೆ ಗ್ವಾಲಿಯರ್‌– ಚಂಬಲ್‌ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ADVERTISEMENT

ಈ ಬಳಿಕ ಮಾತನಾಡಿದ ಅವರು ‘ಈ ಪ್ರದೇಶದಲ್ಲಿ ಕಳೆದ 40 ವರ್ಷಗಳಲ್ಲಿ ಇಷ್ಟು ಪ್ರಮಾಣದಲ್ಲಿ ಹಾನಿ ಉಂಟಾಗಿಲ್ಲ. ಈ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಕೆಲಸ ಮಾಡುತ್ತಿವೆ. ಈವರೆಗೆ ಸುಮಾರು 15,000 ಮಂದಿಯನ್ನು ರಕ್ಷಿಸಲಾಗಿದೆ. ಪರಿಹಾರ ಕಾರ್ಯವೂ ಭರದಿಂದ ಸಾಗಿದೆ’ ಎಂದರು.

‘ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಲಾಗಿದೆ. ಪ್ರವಾಹ ಪರಿಸ್ಥಿತಿ ಮೇಲೆ ಸರ್ಕಾರ ನಿಗಾ ಇಟ್ಟಿದೆ. ಆದಷ್ಟು ಬೇಗ ದುರಸ್ತಿ ಕಾರ್ಯವನ್ನು ನಡೆಸಲಾಗುವುದು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.