ಮುಂಬೈ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ
ಮುಂಬೈ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಳೆದ ಎರಡು ದಿನಗಳಲ್ಲಿ ಮುಂಬೈ ಮಹಾನಗರ ವ್ಯಾಪ್ತಿಯಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ.
ನವಿ ಮುಂಬೈನ ವಾಶಿ ಪ್ರದೇಶದ ವಲಯ 14ರ ರಹೇಜಾ ರೆಸಿಡೆನ್ಸಿಯಲ್ಲಿ ಸೋಮವಾರ ರಾತ್ರಿ 12.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಇಬ್ಬರು ಮಹಿಳೆಯರು, ಆರು ವರ್ಷದ ಬಾಲಕಿ ಹಾಗೂ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವಸತಿ ಸಮುಚ್ಚಯದ 10ನೇ ಮಹಡಿಯಲ್ಲಿ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ 11 ಹಾಗೂ 12ನೇ ಮಹಡಿಗೂ ವ್ಯಾಪಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.
‘ಕಫ ಪರೇಡ್’ನ ಕಟ್ಟಡವೊಂದರಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಸಿಕೊಂಡು ಬಾಲಕನೊಬ್ಬ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ನವಿ ಮುಂಬೈನ ಕಾಮೋಠೆ ಪ್ರದೇಶದ ವಲಯ 36ರಲ್ಲಿ ‘ಅಂಬೆ ಶ್ರದ್ಧಾ’ ವಸತಿ ಕಟ್ಟಡದಲ್ಲಿ ಮಂಗಳವಾರ ಬೆಳಿಗ್ಗೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮಗಳು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.