ADVERTISEMENT

ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ರಾಣಾ ವಿಶೇಷ ವಿಮಾನದಲ್ಲಿ ಭಾರತಕ್ಕೆ ಇಂದು

ಪಿಟಿಐ
Published 10 ಏಪ್ರಿಲ್ 2025, 5:11 IST
Last Updated 10 ಏಪ್ರಿಲ್ 2025, 5:11 IST
ಹವ್ವುರ್‌ ರಾಣಾ
ಹವ್ವುರ್‌ ರಾಣಾ   

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಗಡೀಪಾರು ಮಾಡಲು ಇದ್ದ ಎಲ್ಲ ಅಡೆತಡೆಗಳನ್ನು ಅಮೆರಿಕ ತೆಗೆದುಹಾಕಿದ ನಂತರ ಇಂದು(ಏ.10) ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನ ಮೂಲದ ಕೆನಡಾದ ಪ್ರಜೆ 64 ವರ್ಷದ ರಾಣಾ ಅವರನ್ನು ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ.

ಭಾರತದ ಬಹು ಏಜೆನ್ಸಿ ತಂಡವು ಅಮೆರಿಕಕ್ಕೆ ಹೋಗಿದ್ದು, ರಾಣಾನನ್ನು ಭಾರತಕ್ಕೆ ಕರೆತರಲು ಎಲ್ಲ ದಾಖಲೆಗಳು ಮತ್ತು ಕಾನೂನು ಸಮಸ್ಯೆಗಳನ್ನು ಅಮೆರಿಕದ ಅಧಿಕಾರಿಗಳೊಂದಿಗೆ ಪೂರ್ಣಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಅಮೆರಿಕ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳು ರಾಣಾ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಗಡೀಪಾರು ತಪ್ಪಿಸಿಕೊಳ್ಳುವ ಕೊನೆಯ ಪ್ರಯತ್ನ ವಿಫಲವಾದ ನಂತರ ರಾಣಾನನ್ನು ಭಾರತಕ್ಕೆ ಕರೆತರಲಾಗುತ್ತಿದೆ.

64 ವರ್ಷದ ರಾಣಾ ಪಾಕಿಸ್ತಾನ ಮೂಲದ ಕೆನಡಾ ಪ್ರಜೆ/ 2008ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನಿ ಅಮೆರಿಕನ್ ಪ್ರಜೆ ಡೇವಿಡ್ ಕೋಲ್ಮನ್ ಹೆಡ್ಲಿ ಅಲಿಯಾಸ್ ದಾವೂದ್ ಗಿಲಾನಿಯ ನಿಕಟ ಸಹಚರ.

‘ಅಮೆರಿಕ ಸುಪ್ರೀಂ ಕೋರ್ಟ್ ರಾಣಾ ಮನವಿಯನ್ನು ತಿರಸ್ಕರಿಸಿದೆ ಎಂದು ನಿಮಗೆಲ್ಲರಿಗೂ ತಿಳಿದಿದೆ. ರಾಣಾನನ್ನು ಗಡೀಪಾರು ಮಾಡುವ ಬಗ್ಗೆ ಈ ಹಂತದಲ್ಲಿ ನನಗೆ ಯಾವುದೇ ಮಾಹಿತಿ ಇಲ್ಲ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಸೂಕ್ತ ಸಮಯದಲ್ಲಿ ನಿಮಗೆ ಅಪ್ಡೇಟ್ ನೀಡುತ್ತೇವೆ ಎಂದೂ ಅವರು ಮಾಧ್ಯಮಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

2008ರ ನವೆಂಬರ್ 26ರಂದು, 10 ಪಾಕಿಸ್ತಾನಿ ಭಯೋತ್ಪಾದಕರ ಗುಂಪು ಅರಬ್ಬಿ ಸಮುದ್ರ ಮಾರ್ಗದ ಮೂಲಕ ಮುಂಬೈಗೆ ನುಗ್ಗಿ, ಒಂದು ರೈಲ್ವೆ ನಿಲ್ದಾಣ, ಎರಡು ಐಷಾರಾಮಿ ಹೋಟೆಲ್‌ಗಳು ಮತ್ತು ಯಹೂದಿ ಕೇಂದ್ರದ ಮೇಲೆ ಸಂಘಟಿತ ದಾಳಿ ನಡೆಸಿತ್ತು. ಸುಮಾರು 60 ಗಂಟೆಗಳ ಕಾಲ ನಡೆದ ಈ ದಾಳಿಯಲ್ಲಿ 166 ಜನರು ಸಾವಿಗೀಡಾಗಿದ್ದರು.

ಸೆರೆಸಿಕ್ಕಿದ್ದ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್‌ನನ್ನು 2012ರಲ್ಲಿ ಪುಣೆಯ ಯೆರವಡಾ ಜೈಲಿನಲ್ಲಿ ಗಲ್ಲಿಗೇರಿಸಲಾಯಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.