ನವದೆಹಲಿ: 2006ರಲ್ಲಿ ಮುಂಬೈ ಲೋಕಲ್ ರೈಲಿನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ ಮತ್ತು ಎನ್.ಕೋಟೀಶ್ವರ ಸಿಂಗ್ ಅವರನ್ನು ಒಳಗೊಂಡ ನ್ಯಾಯಪೀಠವು, ಪ್ರಕರಣದ ಎಲ್ಲ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.
ಹೈಕೋರ್ಟ್ ತೀರ್ಪನ್ನು ಪೂರ್ವ ನಿದರ್ಶನವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಶ್ಯಾಮ್ ಚಂದಕ್ ನೇತೃತ್ವದ ನ್ಯಾಯಪೀಠವು, ‘ಆರೋಪಿಗಳೆಲ್ಲರೂ, ಅಪರಾಧ ಎಸಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ತೀರ್ಮಾನಿಸಿ, ವಿಚಾರಣಾ ನ್ಯಾಯಾಲಯವು 12 ಮಂದಿಗೆವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿತ್ತು.
2006ರ ಜುಲೈ 11ರಂದು ಮುಂಬೈ ಸ್ಥಳೀಯ ರೈಲುಗಳಲ್ಲಿ ವಿವಿಧೆಡೆ ನಡೆದ ಬಾಂಬ್ ಸ್ಫೋಟಗಳಲ್ಲಿ 180ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.