ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ದೂರದೃಷ್ಟಿಯುಳ್ಳ ಹಾಗೂ ಜನಪ್ರಿಯ ನಾಯಕರಲ್ಲೊಬ್ಬರಾಗಿದ್ದಾರೆ. ಅವರ ನಾಯಕತ್ವದಲ್ಲಿ ಭಾರತವು ಬೇರೆ ದೇಶಗಳಿಗೂ ಮಾದರಿಯಾಗುವಂತೆ ಬದಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ 75ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಬಿಜೆಪಿಯು ಸೆ.17 ರಿಂದ ಅ.2 ರವರೆಗೆ ದೇಶದಾದ್ಯಂತ ‘ಸೇವಾ ಪಖವಾಡಾ’ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಲ್ಲಿ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ.
‘ಸೇವಾ ಪಖವಾಡಾ’ ಕಾರ್ಯಕ್ರಮವು ಪ್ರಧಾನಿ ಮೋದಿ ಅವರ ಜನ್ಮದಿನದಂದೇ ಆರಂಭಗೊಂಡಿರುವುದು ನಮ್ಮ ಪುಣ್ಯ. ಕಳೆದ 11 ವರ್ಷಗಳಲ್ಲಿ ಮೋದಿ ಸರ್ಕಾರವು ಹಣಕಾಸು, ಶಿಕ್ಷಣ, ಆರೋಗ್ಯ, ಕೃಷಿ, ಗ್ರಾಮಾಭಿವೃದ್ಧಿ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಅಭೂತಪೂರ್ವ ದಾಖಲೆ ಮಾಡಿದೆ ಎಂದು ಯೋಗಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರ ಅವಧಿಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ, ಕಾಶಿ ವಿಶ್ವನಾಥ ಕಾರಿಡಾರ್, ಕೇದಾರನಾಥ ಹಾಗೂ ಬದರಿನಾಥಗಳ ಅಭಿವೃದ್ದಿ ಹಾಗೂ ಉಜ್ಜಯನಿಯಲ್ಲಿ ಮಹಾಕಾಲ್ ಯೋಜನೆಯ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ಧಾರ್ಮಿಕ ಪರಂಪರೆಯನ್ನು ಮರಳಿ ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್, ಬ್ರಿಜೇಶ್ ಪಾಠಕ್ ಹಾಗೂ ಬಿಜೆಪಿ ನಾಯಕರು ಮತ್ತು ಸಚಿವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.