ADVERTISEMENT

ಮೊರ್ಬಿ ದುರಂತ ಸ್ಥಳಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಅಕ್ಟೋಬರ್ 2022, 9:30 IST
Last Updated 31 ಅಕ್ಟೋಬರ್ 2022, 9:30 IST
   

ನವದೆಹಲಿ: ಗುಜರಾತ್‌ನ ಮೊರ್ಬಿ ತೂಗು ಸೇತುವೆ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಮಂಗಳವಾರ ಮಧ್ಯಾಹ್ನ ಪ್ರಧಾನಿ ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೇ ಗುಜರಾತ್‌ ಮುಖ್ಯಮಂತ್ರಿ ಭೂಪೇಂದರ್‌ ಪಟೇಲ್‌ ಜೊತೆ ಪ್ರಧಾನಿ ದೂರವಾಣಿ ಮಾತನಾಡಿ ಘಟನೆ ವಿವರ ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಘಟನೆಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿರುವ ಮೋದಿ, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದಿದ್ದರು. ಘಟನೆಯಲ್ಲಿ ಮೃತರ ಕುಟುಂಬಕ್ಕೆ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ನೀಡುವುದಾಗಿಯೂ ಘೋಷಿಸಿದ್ದರು.

ADVERTISEMENT

ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಭಾನುವಾರ ಸಂಜೆ ಮುರಿದು ಬಿದ್ದಿತ್ತು. ಈ ವರೆಗೆ 185 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಸೇನೆ, ನೌಕಾಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌), ರಾಜ್ಯ ವಿಪತ್ತು ನಿರ್ವಹಣಾ ತಂಡ (ಎಸ್‌ಡಿಆರ್‌ಎಫ್‌), ಅಗ್ನಿಶಾಮಕ ದಳ, ಮುಳುಗು ತಜ್ಞರು ಸೇರಿದಂತೆ 200ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.