ADVERTISEMENT

ಸೆ.2ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಾಸಿಕ್ ಪೊಲೀಸರಿಂದ ರಾಣೆಗೆ ನೋಟಿಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಆಗಸ್ಟ್ 2021, 4:00 IST
Last Updated 25 ಆಗಸ್ಟ್ 2021, 4:00 IST
ಕೇಂದ್ರ ಸಚಿವ ನಾರಾಯಣ ರಾಣೆ
ಕೇಂದ್ರ ಸಚಿವ ನಾರಾಯಣ ರಾಣೆ    

ಮುಂಬೈ: ‘ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಸಂಬಂಧ ಸೆಪ್ಟೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಸಚಿವ ನಾರಾಯಣ ರಾಣೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ನಾಸಿಕ್ ಪೊಲೀಸರು ತಿಳಿಸಿದ್ದಾರೆ.

‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕೆನ್ನೆಗೆ ಬಾರಿಸುತ್ತೇನೆ’ ಎಂದು ಹೇಳಿದ್ದಕ್ಕೆ ಬಂಧಿಸಲಾಗಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಲಾಗಿತ್ತು. ಬಳಿಕ ತಡರಾತ್ರಿ ಜಾಮೀನು ನೀಡಲಾಗಿದೆ.

ಇತ್ತೀಚೆಗೆ ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆ ನಡೆಸುತ್ತಿದ್ದ ರಾಣೆ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ನಂತರ ಸಂಗಮೇಶ್ವರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು.

ADVERTISEMENT

ರಾಯಗಡ ಜಿಲ್ಲೆಯಲ್ಲಿ ಮಾತನಾಡಿದ್ದ ರಾಣೆ ಅವರು, ‘ಠಾಕ್ರೆ ಅವರು ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಷಣ ಮಾಡುವಾಗ, ದೇಶಕ್ಕೆ ಸ್ವಾತಂತ್ರ್ಯ ಬಂದು ಎಷ್ಟು ವರ್ಷ ಆಗಿದೆ ಎಂಬುದನ್ನೇ ಮರೆತು ಹೋದರು. ಪಕ್ಕದಲ್ಲಿ ಇರುವವರನ್ನು ಕೇಳಿ, ಭಾಷಣ ಮುಂದುವರಿಸಿದ್ದರು. ನಾನು ಅಲ್ಲಿಇದ್ದಿದ್ದರೆ, ಅವರ ಕೆನ್ನೆಗೆ ಬಾರಿಸುತ್ತಿದ್ದೆ’ ಎಂದು ಹೇಳಿದ್ದರು.

ಅವರ ಈ ಹೇಳಿಕೆಗೆ ಶಿವಸೇನಾ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ರಾಣೆ ವಿರುದ್ಧ ಮಹದ್, ನಾಸಿಕ್ ಮತ್ತು ರಾಯಗಡ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ರಾಣೆ ಅವರ ಭಾಷಣದ ನಂತರ ಹಲವೆಡೆ ಘರ್ಷಣೆಯೂ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.