ADVERTISEMENT

ಸೋನಿಯಾ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

ಪಿಟಿಐ
Published 15 ಅಕ್ಟೋಬರ್ 2021, 2:25 IST
Last Updated 15 ಅಕ್ಟೋಬರ್ 2021, 2:25 IST
ನವಜೋತ್ ಸಿಂಗ್ ಸಿಧು (ಪಿಟಿಐ ಚಿತ್ರ)
ನವಜೋತ್ ಸಿಂಗ್ ಸಿಧು (ಪಿಟಿಐ ಚಿತ್ರ)   

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮೇಲೆ ಸಂಪೂರ್ಣ ನಂಬಿಕೆ ಇದೆ. ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಗಳಿಗೆ ಬದ್ಧನಾಗಿರುವೆ ಎಂದು ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಗುರುವಾರ ನವದೆಹಲಿಗೆ ತೆರಳಿದ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಅವರನ್ನು ಭೇಟಿಮಾಡಿ ಚರ್ಚೆ ನಡೆಸಿದರು. ಮಾತುಕತೆ ಸುಮಾರು ಒಂದು ಗಂಟೆ ಕಾಲ ನಡೆದಿದೆ.

ವರಿಷ್ಠರ ಭೇಟಿ ಬಳಿಕ ವರದಿಗಾರರ ಜತೆ ಮಾತನಾಡಿದ ಸಿಧು, ‘ನನ್ನ ಕಳಕಳಿ ಏನೆಂಬುದನ್ನು ಈಗಾಗಲೇ ಹೈಕಮಾಂಡ್‌ಗೆ ತಿಳಿಸಿದ್ದೇನೆ. ಅಧ್ಯಕ್ಷರು ತೆಗೆದುಕೊಳ್ಳುವ ನಿರ್ಧಾರಗಳು ಪಕ್ಷದ ಮತ್ತು ಪಂಜಾಬ್‌ನ ಹಿತಾಸಕ್ತಿಗೆ ಪೂರಕವಾಗಿರಲಿವೆ ಎಂಬ ಭರವಸೆ ಇದೆ. ನಾಯಕತ್ವದ ಮೇಲೆ ನನಗೆ ಪೂರ್ಣ ನಂಬಿಕೆ ಇದೆ’ ಎಂದು ಹೇಳಿದ್ದಾರೆ.

ADVERTISEMENT

‘ಪಂಜಾಬ್ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ, ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ ಇನ್ನಷ್ಟು ಬಲಪಡಿಸುವಂತೆ ಸಿಧು ಅವರಿಗೆ ಸೂಚಿಸಲಾಗಿದೆ’ ಎಂದು ಹರೀಶ್ ರಾವತ್ ಹೇಳಿದ್ದಾರೆ.

ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ನೇಮಕ ಮಾಡಿದ ಬಳಿಕ ಪಕ್ಷದ ನಿರ್ಧಾರಗಳ ವಿರುದ್ಧ ಬಂಡಾಯವೆದ್ದಿದ್ದ ಸಿಧು ಇತ್ತೀಚೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅದನ್ನು ಹೈಕಮಾಂಡ್ ಅಂಗೀಕರಿಸಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.