
ಅಲ್– ಫಲಾಹ್ ವಿಶ್ವವಿದ್ಯಾಲಯ
ನವದೆಹಲಿ: ದೆಹಲಿ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿರುವ ಬೆನ್ನಲ್ಲೇ ಅಲ್ಪಸಂಖ್ಯಾತ ಸ್ಥಾನಮಾನವನ್ನು ಏಕೆ ಹಿಂತೆಗೆದುಕೊಳ್ಳಬಾರದು ಎಂದು ಪ್ರಶ್ನಿಸಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗವು (ಎನ್‌ಸಿಎಂಇಐ) ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
‘ನವೆಂಬರ್ 21ರಂದು (ಶುಕ್ರವಾರ) ಫಲಾಹ್ ವಿಶ್ವವಿದ್ಯಾಲಯಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ಡಿಸೆಂಬರ್ 4ರೊಳಗೆ ವರದಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಹರಿಯಾಣದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಲಾಗಿದೆ’ ಎಂದೂ ಎನ್‌ಸಿಎಂಇಐ ಮೂಲಗಳು ಹೇಳಿವೆ.
ಸಂವಿಧಾನದ 30(1)ನೇ ವಿಧಿಯು ಭಾಷೆ ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಮೂಲಭೂತ ಹಕ್ಕನ್ನು ಒದಗಿಸುತ್ತದೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗವು ಅರೆ-ನ್ಯಾಯಾಂಗ ಸಂಸ್ಥೆಯಾಗಿದ್ದು, ಈ ಕುರಿತು ತೀರ್ಪು ನೀಡುವ, ಸಲಹಾ ಮತ್ತು ಶಿಫಾರಸು ಮಾಡುವ ಅಧಿಕಾರವನ್ನು ಹೊಂದಿದೆ.
ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಡಾ. ಉಮರ್ ನಬಿ ಮತ್ತು ಡಾ. ಮುಜಮ್ಮಿಲ್ ಶಕೀಲ್ ಗನೈ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಸ್ಫೋಟ ಪ್ರಕರಣದ ಬೆನ್ನಲ್ಲೇ ಹಲವು ವಿಚಾರಗಳಿಗಾಗಿ ಅಲ್-ಫಲಾಹ್ ವಿಶ್ವವಿದ್ಯಾಲಯವು ಸುದ್ದಿಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.