ನೇಪಾಳದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.
–ರಾಯಿಟರ್ಸ್ ಚಿತ್ರ
ನವದೆಹಲಿ: ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಯುವಕರು ಪ್ರಾಣ ಕಳೆದುಕೊಂಡಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಜತೆಗೆ, ಶಾಂತಿಯುತ ರೀತಿಯಲ್ಲಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಕ್ರಮ ತೆಗೆದುಕೊಳ್ಳುವ ವಿಶ್ವಾಸ ಇದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಸ್ ಪಡೆಯಬೇಕು ಮತ್ತು ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಠ್ಮಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸಿದ ಬೃಹತ್ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ಘಟನೆಯಲ್ಲಿ 19 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
‘ನೇಪಾಳದಲ್ಲಿನ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಹಿಂಸಾಚಾರದಲ್ಲಿ ಯುವಕರು ಮೃತಪಟ್ಟಿರುವುದಕ್ಕೆ ತೀವ್ರ ದುಃಖಿತರಾಗಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇವೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
‘ಕಠ್ಮಂಡು ಸೇರಿದಂತೆ ನೇಪಾಳದ ಹಲವು ನಗರಗಳಲ್ಲಿ ಕರ್ಫ್ಯೂ ವಿಧಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ನೇಪಾಳದಲ್ಲಿರುವ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದ ಇರುವಂತೆ ಮತ್ತು ನೇಪಾಳದ ಅಧಿಕಾರಿಗಳು ಹೊರಡಿಸಿದ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ’ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.