ADVERTISEMENT

ಪಟಾಕಿ ನಿಷೇಧಿಸಿ ಎನ್‌ಜಿಟಿ ಆದೇಶ, ಅಧಿಕ ಮಾಲಿನ್ಯ ದಾಖಲಾದ ನಗರಗಳಿಗೂ ಅನ್ವಯ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 7:07 IST
Last Updated 9 ನವೆಂಬರ್ 2020, 7:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ವಲಯ (ಎನ್‌ಸಿಆರ್)ದಲ್ಲಿ ನವೆಂಬರ್ 9ರಿಂದ 30ರವರೆಗೆ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಆದೇಶ ನೀಡಿದೆ.

ಪಟಾಕಿ ನಿಷೇಧ ಕೋರಿ ಇಂಡಿಯನ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್‌ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಪೂರ್ಣಗೊಳಿಸಿ ನವೆಂಬರ್ 5ರಂದು ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ ಸೋಮವಾರ ಆದೇಶ ಪ್ರಕಟಿಸಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಪ್ರಮಾಣದಲ್ಲಿ ಹಾಗೂ ವಾಯು ಮಾಲಿನ್ಯವು ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವ ದೇಶದ ಇತರ ನಗರ ಮತ್ತು ಪಟ್ಟಣಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ಗಾಳಿಯ ಗುಣಮಟ್ಟವು ‘ಮಧ್ಯಮ’ ಅಥವಾ ‘ಸಾಮಾನ್ಯ’ವಾಗಿ ಇರುವ ನಗರ ಮತ್ತು ಪಟ್ಟಣಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು, ಬಳಸಲು ಅವಕಾಶ ನೀಡಬಹುದು. ಅಲ್ಲೆಲ್ಲ ದೀಪಾವಳಿ, ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ಸಂದರ್ಭ ಎರಡು ಗಂಟೆಗಳ ಕಾಲ ಪಟಾಕಿ ಸುಡುವುದಕ್ಕೆ ಅವಕಾಶ ನೀಡಿ ಸಂಬಂಧಿಸಿದ ರಾಜ್ಯ ಸರ್ಕಾರಗಳು ಆದೇಶ ಹೊರಡಿಸಬಹುದು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

ಕೋವಿಡ್–19 ನಿಯಂತ್ರಿಸುವ ನಿಟ್ಟಿನಲ್ಲಿ ವಾಯುಮಾಲಿನ್ಯ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು ಎಂದೂ ಆದೇಶದಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.