ADVERTISEMENT

ವಿಧ್ವಂಸಕ ಕೃತ್ಯಕ್ಕೆ ಸಂಚು: ಕರ್ನಾಟಕ ಸೇರಿ ದೇಶದ 25 ಸ್ಥಳಗಳಲ್ಲಿ ಎನ್ಐಎ ಶೋಧ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮೇ 2023, 4:37 IST
Last Updated 31 ಮೇ 2023, 4:37 IST
ಎನ್ಐಎ
ಎನ್ಐಎ   

ಬೆಂಗಳೂರು: ಕರ್ನಾಟಕ, ಕೇರಳ ಹಾಗೂ ಬಿಹಾರದ 25 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ ) ಅಧಿಕಾರಿಗಳ ತಂಡ ಸ್ಥಳೀಯ ಪೊಲೀಸರ‌ ನೆರವಿನಿಂದ‌ ಬುಧವಾರ ಶೋಧ ಕಾರ್ಯದಲ್ಲಿ ತೊಡಗಿದೆ.

ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳ ತಾಲ್ಲೂಕಿನ‌ ಕೆಲವೆಡೆ ಸ್ಥಳೀಯ ಪೊಲೀಸರ‌ ನೆರವಿನಿಂದ‌ ಶೋಧ ಕಾರ್ಯದಲ್ಲಿ ತೊಡಗಿದೆ. ಇಸ್ಲಾಮಿಕ್‌ ಸ್ಟೇಟ್ ಜೊತೆ‌ ಸೇರಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದವರ ಶೋಧಕ್ಕಾಗಿ ಎನ್ಐಎ ತಂಡ ಜಿಲ್ಲೆಗೆ ಭೇಟಿ ನೀಡಿದೆ. ಹೆಚ್ಚಿನ‌ ಮಾಹಿತಿ ಲಭ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.

ಕೇರಳ ಹಾಗೂ ಬಿಹಾರ ರಾಜ್ಯದ ಹಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ‌ ಮಾಹಿತಿ ಲಭ್ಯವಾಗಿಲ್ಲ.

ADVERTISEMENT

ಕಳೆದ ವರ್ಷ 2022ರ ಜುಲೈ ತಿಂಗಳಲ್ಲಿ ಬಿಹಾರ ರಾಜಧಾನಿ ಪಟ್ನಾದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಅಂಶ ಬಹಿರಂಗವಾಗಿತ್ತು.

ಈ ಪ್ರಕರಣದ ತನಿಖೆ ನಡೆಸುತ್ತಿರುವ ಐಎನ್​ಎ ಅಧಿಕಾರಿಗಳು ಫುಲ್ವಾರಿ ಶರೀಫ್ ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಬಹಿರಂಗವಾದ ಮಾಹಿತಿ ಆಧಾರದ ಮೇಲೆ ಈ ಶೋಧ ಕಾರ್ಯ ನಡೆಯುತ್ತಿದೆ ಎಂದು ಎನ್‌ಐಎ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.