ತಿರುವನಂತಪುರ: ಚಿನ್ನ ಕಳ್ಳ ಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡವು ಮಂಗಳವಾರ ಕೇರಳದ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಸ್ವಾಯತ್ತ ಸಂಸ್ಥೆಯ ಕಚೇರಿಗೆ ಭೇಟಿ ನೀಡಿ ಕುರಾನ್ ವಿತರಣೆ ಬಗ್ಗೆ ಮಾಹಿತಿ ಪಡೆದುಕೊಂಡಿದೆ.
ತಿರುವನಂತಪುರದ ಸೆಂಟರ್ ಫಾರ್ ಅಡ್ವಾನ್ಸ್‌ಡ್ ಪ್ರಿಂಟಿಂಗ್ ಆ್ಯಂಡ್ ಟ್ರೈನಿಂಗ್ ಸಂಸ್ಥೆಯ(ಸಿ–ಆಪ್ಟ್) ಕಚೇರಿಗೆ ಭೇಟಿ ನೀಡಿದ ಎನ್‌ಐಎ ಅಧಿಕಾರಿಗಳು, ಯುಎಇಯಿಂದ ರಾಜತಾಂತ್ರಿಕ ಮಾರ್ಗದ ಮೂಲಕ ತಂದಿರುವ ಕುರಾನ್ ವಿತರಣೆಯ ಕುರಿತು ಸಂಸ್ಥೆಯ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕುರಾನ್ ವಿತರಣೆ ಸಂಬಂಧ ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್ ಅವರನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿದ್ದವು.
ಕುರಾನ್ ಅನ್ನು ವಿವಿಧ ಸಂಸ್ಥೆಗಳಿಗೆ ವಿತರಿಸುವುದಕ್ಕೂ ಮುನ್ನ ಸಿ–ಆಪ್ಟ್‌ಗೆ ತರಲಾಗಿತ್ತು ಎಂದು ಆರೋಪಿಸಲಾಗಿತ್ತು.
ಚಿನ್ನ ಕಳ್ಳ ಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಕೊಚ್ಚಿಯ ವಿಶೇಷ ನ್ಯಾಯಾಲಯವು ನಾಲ್ಕು ದಿನಗಳಿಗೆ ಎನ್‌ಐಎ ವಶಕ್ಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.