ADVERTISEMENT

ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ NIA ಶೋಧ

ಪಿಟಿಐ
Published 9 ಸೆಪ್ಟೆಂಬರ್ 2025, 10:24 IST
Last Updated 9 ಸೆಪ್ಟೆಂಬರ್ 2025, 10:24 IST
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)   

ನವದೆಹಲಿ: ಐಸಿಸ್‌ ಹಾಗೂ ಇತರ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಭಯೋತ್ಪಾದಕ ಪಿತೂರಿ ಸಂಬಂಧ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಕರ್ನಾಟಕ ಸೇರಿ ಐದು ರಾಜ್ಯಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಒಟ್ಟು 21 ಕಡೆಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಹಾಗೂ ತಮಿಳುನಾಡು ಮುಂತಾದ ರಾಜ್ಯಗಳಲ್ಲಿ ಹಾಗೂ ಜಮ್ಮ ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸೋಮವಾರ ಶೋಧ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವರ್ಷ ಜೂನ್‌ನಲ್ಲಿ ತಮಿಳುನಾಡು ಚೆಂಗಲ್‌ಪೆಟ್ಟು ಜಿಲ್ಲೆಯ ಕಾಯರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರನ್ನು ಎನ್‌ಐಎ ವಹಿಸಿಕೊಂಡಿತ್ತು. ಸೋಮವಾರದ ಶೋಧ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು ಹಾಗೂ ಅಪರಾಧ ಸಾಕ್ಷ್ಯಚಿತ್ರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಹೇಳಲಾಗಿದೆ.

ADVERTISEMENT

ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ಆರೋಪದ ಮೇಲೆ ಅಖ್ಲಾಥೂರ್ ಅಲಿಯಾಸ್ ಮೊಹಮ್ಮದ್ ಅಖ್ಲಾಕ್ ಮುಜಾಹಿದ್ ಎಂಬಾತನ ಬಂಧನದೊಂದಿಗೆ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆತ ಪಾಕಿಸ್ತಾನ ಮತ್ತು ಸಿರಿಯಾದಲ್ಲಿನ ಅನೇಕ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾಗಿ ತನಿಖೆ ವೇಳೆ ಗೊತ್ತಾಗಿದೆ ಎಂದು ಎನ್‌ಐಎ ಹೇಳಿದೆ.

ನಿಷೇಧಿತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸೇರಿಕೊಂಡು ಭಾರತದ ವಿರುದ್ಧ ಜಿಹಾದ್ ನಡೆಸಲು ಜನ ಮತ್ತು ಸಾಮಗ್ರಿಗಳನ್ನು ಸಂಗ್ರಹಿಸುವ ಗುರಿ ಹೊಂದಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ. ಆರೋಪಿಯು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಈ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದಾನೆ ಎನ್ನುವುದು ತನಿಖೆಯಿಂದ ಗೊತ್ತಾಗಿದೆ ಎಂದು ಅದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.