ನವದೆಹಲಿ: ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು 7 ರಾಜ್ಯಗಳ 15 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ ಎಂದು ವರದಿಯಾಗಿದೆ.
ದೆಹಲಿ, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಅಸ್ಸಾಂನಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಎನ್‌ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನ ಗುಪ್ತಚರ ಸಂಸ್ಥೆಯೊಂದಿಗೆ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದಡಿ ಸಿಆರ್‌ಪಿಎಫ್ ಸಿಬ್ಬಂದಿಯೊಬ್ಬರನ್ನು ಎನ್‌ಐಎ ತಂಡವು ಮೇ 26ರಂದು ದೆಹಲಿಯಲ್ಲಿ ಬಂಧಿಸಿತ್ತು. ಇದರ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಎನ್‌ಐಎ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿ ಮೋತಿ ರಾಮ್ ಜಾಟ್ ಅವರು ಬೇಹುಗಾರಿಕಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರು 2023ರಿಂದ ಪಾಕ್ ಗುಪ್ತಚರ ಅಧಿಕಾರಿಗಳ ಜೊತೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ ಎಂದು ಎನ್‌ಐಎ ಅಧಿಕಾರಿಗಳು ಆರೋಪಿಸಿದ್ದರು.
ಪಟಿಯಾಲ ಹೌಸ್ ನ್ಯಾಯಾಲಯವು ಮೋತಿ ರಾಮ್‌ಗೆ ಜೂನ್ 6ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.