ನವದೆಹಲಿ: ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ಧ ಟೀಕೆ ಮಾಡಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.
‘ನಾವು ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಮಾತ್ರವಲ್ಲ, ದೇಶದ ವಿರುದ್ಧವೇ ಹೋರಾಟ ಮಾಡುತ್ತಿದ್ದೇವೆ ಎಂದು ಸಂವಿಧಾನ ಬದ್ಧವಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ವಿರೋಧ ಪಕ್ಷದ ನಾಯಕ ಹೇಳುತ್ತಿದ್ದಾರೆ. ರಾಹುಲ್ ಗಾಂಧಿ ತಮ್ಮ ಕೈಯಲ್ಲಿ ಸಂವಿಧಾನದ ಪುಸ್ತಕ ಯಾಕೆ ಹಿಡಿದುಕೊಂಡು ತಿರುಗಾಡುತ್ತಿದ್ದಾರೆ’ ಎಂದು ಅವರು ಪ‍್ರಶ್ನಿಸಿದ್ದಾರೆ.
ಬುಧವಾರ ದೆಹಲಿಯ ಕೊಲ್ಟ ರಸ್ತೆಯಲ್ಲಿರುವ ನೂತನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ‘ನಾವು ನ್ಯಾಯಯುತ ಹೋರಾಟ ನಡೆಸುತ್ತಿದ್ದೇವೆ ಎಂದು ಭಾವಿಸಬೇಡಿ. ಇದರಲ್ಲಿ ಯಾವುದೇ ನ್ಯಾಯೋಚಿತತೆ ಇಲ್ಲ. ನಾವು ಬಿಜೆಪಿ ಅಥವಾ ಆರ್‌ಎಸ್‌ಎಸ್ ಎಂಬ ರಾಜಕೀಯ ಸಂಘಟನೆಯೊಂದಿಗೆ ಹೋರಾಡುತ್ತಿದ್ದೇವೆ ಎಂದು ನೀವು ನಂಬಿದರೆ, ಏನು ನಡೆಯುತ್ತಿದೆ ಎಂದು ನಿಮಗೆ ಅರ್ಥವಾಗುವುದಿಲ್ಲ. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ನಾವು ಈಗ ಬಿಜೆಪಿ, ಆರೆಸ್ಸೆಸ್ ಮತ್ತು ದೇಶದ ವಿರುದ್ಧ ಹೋರಾಡುತ್ತಿದ್ದೇವೆ’ ಎಂದು ಹೇಳಿದ್ದರು.
ಇದೇ ವೇಳೆ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್, ‘ಮಹಾರಾಷ್ಟ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಏರಿಕೆಯಾಗಿರುವುದರ ಬಗ್ಗೆ ನಮಗೆ ಮಾಹಿತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿತ್ತು’ ಎಂದು ಕಿಡಿಕಾರಿದ್ದರು..
‘ಯಾವ ಉದ್ದೇಶಕ್ಕಾಗಿ ಹೀಗೆ ಮಾಡಲಾಗುತ್ತಿದೆ? ಚುನಾವಣಾ ಆಯೋಗವನ್ನು ನಾಶ ಮಾಡುತ್ತಿರುವುದೇಕೆ? ಅವರು ನಮಗೆ ಮತದಾರರ ಪಟ್ಟಿಯನ್ನು ಕೊಡಲು ನಿರಾಕರಿಸುವುದೇಕೆ?’ ಎಂದು ಪ್ರಶ್ನಿಸಿದ್ದರು.
ಪ್ರತಿಯೊಬ್ಬ ಕಾಂಗ್ರೆಸಿ ಹಾಗೂ ವಿರೋಧ ಪಕ್ಷದ ಸದಸ್ಯರು ಗಮನದಲ್ಲಿಟ್ಟುಕೊಳ್ಳಬೇಕು, ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆಗಳಿವೆ. ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.