ADVERTISEMENT

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಭೇಟಿಯಾದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 15:44 IST
Last Updated 27 ಜೂನ್ 2019, 15:44 IST
   

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇದೇ ಮೊದಲ ಬಾರಿಗೆ ಬಜೆಟ್‌ ಮಂಡನೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಿರುವ ಬಿಜೆಪಿ, ಈ ಬಾರಿ ನಿರ್ಮಲಾ ಸೀತಾರಾಮನ್‌ ಅವರನ್ನು ಹಣಕಾಸು ಸಚಿವರನ್ನಾಗಿ ಮಾಡಿದೆ. ಜುಲೈ 5ರಂದು ಬಜೆಟ್‌ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಮನಮೋಹನ್‌ ಸಿಂಗ್‌ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಇಂದು ಔಪಚಾರಿಕವಾಗಿ ಭೇಟಿ ಮಾಡಿದರು.

ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಭೇಟಿಯಾಗುತ್ತಿರುವುದು ಇದೇ ಮೊದಲು.

ADVERTISEMENT

ಆರ್ಥಿಕ ತಜ್ಞ ಎಂದೇ ಕರೆಯಲಾಗುವ ಮನಮೋಹನ್‌ ಸಿಂಗ್‌ ಅವರು, 1991ರಲ್ಲಿ ಪಿ.ವಿ ನರಸಿಂಹರಾವ್‌ ಅವರ ಕೇಂದ್ರ ಮಂತ್ರಿ ಮಂಡಲದಲ್ಲಿ ಹಣಕಾಸು ಸಚಿವರಾಗಿದ್ದರು. 2004ರಿಂದ 2014ರ ವರೆಗೆ ಅವರು ಎರಡು ಅವಧಿಗೆ ದೇಶದ ಪ್ರಧಾನಿಯಾಗಿದ್ದರು.

ಮನಮೋಹನ್‌ ಸಿಂಗ್‌ ಅವರ ರಾಜ್ಯಸಭೆ ಸದಸ್ಯತ್ವದ ಅವಧಿ ಇದೇ ತಿಂಗಳ ಆರಂಭದಲ್ಲಿ ಮುಕ್ತಾಯಗೊಂಡಿದೆ. ಮೂರು ದಶಕಗಳಿಂದಲೂ ಬೆಜಟ್‌ ಅಧಿವೇಶನದಲ್ಲಿ ಸಕ್ರಿಯವಾಗಿರುತ್ತಿದ್ದ ಆರ್ಥಿಕ ತಜ್ಞರೂ ಆದ ಮನಮೋಹನ್‌ ಸಿಂಗ್‌ ಇದೇ ಮೊದಲ ಬಾರಿಗೆ ಬಜೆಟ್‌ ಅಧಿವೇಶನದ ಸಂದರ್ಭದಲ್ಲಿ ಲೋಕಸಭೆಯಿಂದ ಹೊರಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.