ನವದೆಹಲಿ: ‘ಸಾಮಾಜಿಕ ಮಾಧ್ಯಮ ‘ಮೆಟಾ’ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದು, ಈ ವಿಷಯವನ್ನು ಇಲ್ಲಿಗೆ ಮುಗಿಸುತ್ತಿದ್ದೇವೆ’ ಎಂದು ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ಬಳಿಕ ಭಾರತ ಸೇರಿದಂತೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಸರ್ಕಾರಗಳು 2024ರ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳಲಿವೆ ಎಂದು ಪಾಡ್‌ಕಾಸ್ಟ್ ಒಂದರಲ್ಲಿ ಮಾತನಾಡುವ ವೇಳೆ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದರು.
ಹೇಳಿಕೆ ಕುರಿತು ಭಾರತದಿಂದ ವಿರೋಧ ವ್ಯಕ್ತವಾಗುತ್ತಲೇ ಇದಕ್ಕೆ ಪ್ರತಿಕ್ರಿಯಿಸಿರುವ ಮೆಟಾ ಇಂಡಿಯಾದ ಉಪಾಧ್ಯಕ್ಷ ಶಿವನಾಥ್ ಥುರ್ಕಲ್, ಉದ್ದೇಶಪೂರ್ವಕವಲ್ಲದ ಈ ತಪ್ಪಿಗಾಗಿ ಕ್ಷಮೆಯಾಚಿಸುತ್ತೇವೆ ಎಂದಿದ್ದರು.
‘ಕೊನೆಗೂ ಮೆಟಾ ಇಂಡಿಯಾದ ಅಧಿಕಾರಿಗಳು ತಮ್ಮ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ. ಇದು ಭಾರತದ ಸಾಮಾನ್ಯ ಜನರ ಗೆಲುವಾಗಿದೆ’ ಎಂದು ನಿಶಿಕಾಂತ್ ದುಬೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.
‘ಈ ವಿಷಯದ ಬಗ್ಗೆ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಕುರಿತ ಜಂಟಿ ಸಂಸದೀಯ ಸಮಿತಿಯ ಜವಾಬ್ದಾರಿ ಇಲ್ಲಿಗೆ ಮುಗಿದಿದೆ. ಈ ವಿಷಯವನ್ನು ಇಲ್ಲಿಗೆ ಮುಗಿಸಲು ನಾವು ನಿರ್ಧರಿಸಿದ್ದೇವೆ. ಅದಾಗ್ಯೂ, ಭವಿಷ್ಯದಲ್ಲಿ ಸಮಸ್ಯೆಗಳು ಪುನಾರವರ್ತನೆಯಾಗದಂತೆ ಎಚ್ಚರವಹಿಸಲು ಈ ಸಾಮಾಜಿಕ ಮಾಧ್ಯಮಗಳ ಮೇಲೆ ಕಣ್ಣಿಟ್ಟಿರುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.