ನಿತೀಶ್ ಕುಮಾರ್
– ಪಿಟಿಐ ಚಿತ್ರ
ಪಟ್ನಾ(ಬಿಹಾರ): ಜೆಡಿ(ಯು) ವರಿಷ್ಠ ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸಚಿವ ಶ್ರವಣ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಧಾನಿ ಪಟ್ನಾದಲ್ಲಿ ಇಂದು (ಬುಧವಾರ) ನಡೆದ ಜೆಡಿಯು ಶಾಸಕಾಂಗದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರು, ನಿತೀಶ್ ಕುಮಾರ್ ಅವರನ್ನು ಜೆಡಿಯು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಎನ್‌ಡಿಎ ಘಟಕಗಳ ಸಭೆಗೆ ಮುಂಚಿತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸಚಿವಾಲಯದ 'ಸಂವಾದ್'ನಲ್ಲಿ ಈ ಸಭೆ ನಡೆದಿದೆ. ಹೊಸದಾಗಿ ಆಯ್ಕೆಯಾದ ಎಲ್ಲಾ ಶಾಸಕರು ಮತ್ತು 22 ಮಂದಿ ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು ಎಂದು ಅವರು ಹೇಳಿದ್ದಾರೆ.
ಜೆಡಿ (ಯು) ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಅವರನ್ನು ನೇಮಿಸುವ ಪ್ರಸ್ತಾಪವನ್ನು ಪಕ್ಷದ ನಾಯಕರಾದ ವಿಜಯ್ ಚೌಧರಿ ಮತ್ತು ಉಮೇಶ್ ಕುಶ್ವಾಹ ಅವರು ಮಂಡಿಸಿದರು. ಜೆಡಿ(ಯು) ಹಿರಿಯ ನಾಯಕ ಬಿಜೇಂದ್ರ ಯಾದವ್ ಅವರು ಅದನ್ನು ಅನುಮೋದಿಸಿದರು. ನಂತರ, ಜೆಡಿ(ಯು ) ಕಾರ್ಯಕಾರಿ ರಾಷ್ಟ್ರೀಯ ಅಧ್ಯಕ್ಷ ಸಂಜಯ್ ಝಾ ಮತ್ತು ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಕೂಡ ಈ ಪ್ರಸ್ತಾಪವನ್ನು ಅನುಮೋದಿಸಿದರು ಎಂದು ಶ್ರವಣ್ ಕುಮಾರ್ ಹೇಳಿದ್ದಾರೆ.
ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ, ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್, ರಾಜ್ಯದ ಕಲ್ಯಾಣಕ್ಕಾಗಿ ಅವಿಶ್ರಾಂತವಾಗಿ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ.
ನಿತೀಶ್ ಕುಮಾರ್ ಅವರು, ಇಂದು ಸಂಜೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಪ್ರಕ್ರಿಯೆ ಆರಂಭಿಸುವಂತೆ ಅವರು ವಿನಂತಿಸಲಿದ್ದಾರೆ. ಅಲ್ಲದೇ ಇಂದೇ ಬಿಹಾರದ 17ನೇ ವಿಧಾನಸಭೆಯು ವಿಸರ್ಜನೆಗೊಳ್ಳಲಿದೆ.
ಗುರುವಾರ (ನ.20) ಪಟ್ನಾದ ಗಾಂಧಿ ಮೈದಾನದಲ್ಲಿ ದಾಖಲೆಯ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಹಾರದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ತಾರಾಪುರ ಶಾಸಕ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ .
ಹೊಸದಾಗಿ ಆಯ್ಕೆಯಾದ ಶಾಸಕರು, ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾನ್ನಾಗಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ಶಾಸಕಾಂಗ ಪಕ್ಷದ ಉಪ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ 202 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿತು. ಬಿಜೆಪಿ 89 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ನಿತೀಶ್ ಕುಮಾರ್ ನೇತೃತ್ವದ ಜೆಡಿಯು 85 ಸ್ಥಾನಗಳು, ಕೇಂದ್ರ ಸಚಿವ ಚಿರಾಗ್ ಪಸ್ವಾನ್ ಅವರ ಲೋಕ ಜನಶಕ್ತಿ ಪಾರ್ಟಿ (ರಾಮ್ ವಿಲಾಸ್) 19 ಸ್ಥಾನಗಳು, ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ 05 ಸ್ಥಾನಗಳು, ಉಪೇಂದ್ರ ಕುಶ್ವಾಹಾ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಚಾ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.