ನವದೆಹಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಪರಿಷ್ಕರಣೆ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಗಳವಾರ ತಿಳಿಸಿತು.
ಲಿಖಿತ ಪ್ರಶ್ನೆಗೆ ಉತ್ತರಿಸಿದ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರಾಯ್ ಅವರು, ‘ಕೇಂದ್ರ ಸರ್ಕಾರವು 2025ರ ಜೂನ್ 16ರಂದು ಜನಗಣತಿ ನಡೆಸುವ ಉದ್ದೇಶವನ್ನು ಪ್ರಕಟಿಸಿದೆ’ ಎಂದು ತಿಳಿಸಿದರು.
‘ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಮನೆಪಟ್ಟಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ. ಇಲ್ಲಿ ದೇಶದ ಪ್ರತಿಯೊಂದು ಕಟ್ಟಡಕ್ಕೆ ಭೇಟಿ ನೀಡಿ, ಕಟ್ಟಡಗಳು ಮತ್ತು ಮನೆಗಳ ಗುಣಲಕ್ಷಣಗಳನ್ನು ದಾಖಲಿಸಲಾಗುತ್ತದೆ ಮತ್ತು ಪ್ರತಿ ಮನೆಯಲ್ಲಿರುವ ಸ್ವತ್ತುಗಳ ದತ್ತಾಂಶ ಸಂಗ್ರಹಿಸಲಾಗುತ್ತದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಗಣತಿ ನಡೆಯುತ್ತದೆ. ಇಲ್ಲಿ ಪ್ರತಿಯೊಬ್ಬರ ಸಾಮಾಜಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಮತ್ತಿತರ ವೈಯಕ್ತಿಕ ದತ್ತಾಂಶಗಳನ್ನು ಸಂಗ್ರಹಿಸಲಾಗುತ್ತದೆ’ ಎಂದು ತಿಳಿಸಿದರು.
ಜನಗಣತಿಗೆ ತಗಲುವ ಒಟ್ಟು ವೆಚ್ಚದ ಅಂದಾಜನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.