ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ, ದೆಹಲಿ ಸಚಿವಾಲಯದ ಹೊರಕ್ಕೆ ಯಾವುದೇ ಕಡತಗಳು, ದಾಖಲೆಗಳು ಮತ್ತು ಕಂಪ್ಯೂಟರ್‌ಗಳನ್ನು ಹೊತ್ತೊಯ್ಯುವಂತಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.
ಕಡತಗಳ ಸುರಕ್ಷತೆ ಹಿತದೃಷ್ಟಿಯಿಂದ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯ (ಜಿಎಡಿ) ಪೂರ್ವಾನುಮತಿ ಇಲ್ಲದೆ ಯಾವುದೇ ಕಡತ, ದಾಖಲೆ, ಕಂಪ್ಯೂಟರ್ ಹಾರ್ಡ್‌ವೇರ್‌ಗಳನ್ನು ತೆಗೆದುಕೊಂಡು ಹೋಗುವಂತಿಲ್ಲ ಅಥವಾ ಅಳಿಸಿಹಾಕುವಂತಿಲ್ಲ. ಕಡತಗಳ ಸುರಕ್ಷತೆಗೆ ಸಂಬಂಧಿಸಿದಂತೆ ದೆಹಲಿ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಇಲಾಖೆಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಆದೇಶದಲ್ಲಿ ಅವರು ತಿಳಿಸಿದ್ದಾರೆ.
ಆದೇಶವು ಸಚಿವ ಸಂಪುಟದ ಎಲ್ಲಾ ಇಲಾಖೆಗಳು, ಏಜೆನ್ಸಿಗಳು ಮತ್ತು ಕ್ಯಾಂಪ್ ಕಚೇರಿಗಳಿಗೆ ಅನ್ವಯವಾಗಲಿದೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 26 ವರ್ಷಗಳ ನಂತರ ದೆಹಲಿಯಲ್ಲಿ ಗದ್ದುಗೆ ಹಿಡಿದಿದೆ. ಆಮ್ ಆದ್ಮಿ ಪಕ್ಷವು ಪರಾಭವಗೊಂಡಿದೆ. ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ನಾಯಕರು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ. ಹೀಗಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.