ಜಲಗಾಂವ್: ಜಿ20 ಶೃಂಗಸಭೆಯ ವೇಳೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗುವ ಔತಣಕೂಟದ ಆಮಂತ್ರಣ ಪತ್ರಿಕೆಯಲ್ಲಿ 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲು 'ಪ್ರೆಸಿಡೆಂಟ್ ಆಫ್ ಭಾರತ' ಎಂದು ಬರೆಯಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ದೇಶದ ಹೆಸರನ್ನು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್, ‘ದೇಶಕ್ಕೆ ಸಂಬಂಧಿಸಿದ ಹೆಸರಿನ ಬಗ್ಗೆ ಕೇಂದ್ರ ಸರ್ಕಾರವು ಏಕೆ ಗೊಂದಲಕ್ಕೊಳಗಾಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ’ ಎಂದು ಹೇಳಿದರು.
ಸಂವಿಧಾನದಲ್ಲಿ ಭಾರತದ ಹೆಸರನ್ನು ಬದಲಾಯಿಸಲಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಪವಾರ್, ‘ನನಗೆ ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ’ ಎಂದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು INDIA ಮೈತ್ರಿಕೂಟದ ಎಲ್ಲಾ ಪಕ್ಷದ ನಾಯಕರ ಸಭೆಯನ್ನು ಬುಧವಾರ ಕರೆದಿದ್ದಾರೆ. ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಆದರೆ, ದೇಶದ ಹೆಸರನ್ನು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ. ಯಾರೂ ಹೆಸರನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂದರು.
ಭಾರತದ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 9 ರಿಂದ 10 ರವರೆಗೆ ದೆಹಲಿಯಲ್ಲಿ ಜಿ 20 ಶೃಂಗಸಭೆ ನಡೆಯಲಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.