ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ, ನಿತೀಶ್ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ನಿತೀಶ್ ಕುಮಾರ್ ಅವರ ನಡೆಯಲ್ಲಿ ಆಕ್ಷೇಪಾರ್ಹವಾದದ್ದೇನೂ ಇಲ್ಲ, ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗೆಯೇ ಇತ್ತೀಚೆಗೆ ರಾಜಕೀಯ ಪ್ರವೇಶ ಮಾಡಿರುವವರು ರಾಷ್ಟ್ರಗೀತೆಯನ್ನು ಹೇಗೆ ಗೌರವಿಸಬೇಕೆಂದು ಅವರಿಗೆ ಕಲಿಸಬೇಕಾದ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.
‘ನಿತೀಶ್ ಕುಮಾರ್ 20 ವರ್ಷ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ. ಅವರ ಅಧಿಕಾರಾವಧಿಯು ಉತ್ತಮ ಆಡಳಿತದಿಂದ ಗುರುತಿಸಲ್ಪಟ್ಟಿದೆ. ಹಾಗೆಯೇ ಅವರ ಕುಶಾಗ್ರಮತಿ ಪ್ರಪಂಚದಾದ್ಯಂತ ಮೆಚ್ಚುಗೆ ಗಳಿಸಿದೆ. ಈ ವರ್ಷಾಂತ್ಯಕ್ಕೆ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ನಿತೀಶ್ ನೇತೃತ್ವದಲ್ಲಿ ಮತ್ತೊಮ್ಮೆ ಎನ್‌ಡಿಎ ಕೂಟ ಅಧಿಕಾರಕ್ಕೆ ಬರಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನಿಜವಾದ ಖಳನಾಯಕ. ಹತಾಶೆಯಿಂದ ನಿತೀಶ್ ಕುಮಾರ್ ಬಗ್ಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ ಎಂದು ಮಾಂಝಿ ವಾಗ್ದಾಳಿ ನಡೆಸಿದ್ದಾರೆ.
ಪಟ್ನಾದಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ನಿತೀಶ್ ಕುಮಾರ್ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂಬ ಆರೋಪಿಸಿ ನಿತೀಶ್ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿದ್ದವು.
ನಿತೀಶ್ ನಡೆ ಖಂಡಿಸಿದ ಯಾದವ್: ನಿತೀಶ್ ಕುಮಾರ್ ಅವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ. ಬಿಹಾರಿ ಆಗಿ ಅವರು ಮಾಡಿದ ಕೆಲಸದಿಂದ ನನಗೆ ನಾಚಿಕೆಯಾಗುತ್ತಿದೆ. ಮುಖ್ಯಮಂತ್ರಿ ರಾಜ್ಯದ ನಾಯಕರು, ನಿನ್ನೆಯ ಘಟನೆ ದುರದೃಷ್ಟಕರ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಆಕ್ರೋಶ ಹೊರಹಾಕಿದ್ದರು.
‘ಭಾರತದ ರಾಜಕೀಯದ ಇತಿಹಾಸದಲ್ಲಿ ಮುಖ್ಯಮಂತ್ರಿಯೊಬ್ಬರು ರಾಷ್ಟ್ರಗೀತೆಯನ್ನು ಅಗೌರವಿಸಿದ ಮೊದಲ ಘಟನೆ ಇದು. ನಿತೀಶ್ ಕುಮಾರ್ ರಾಷ್ಟ್ರದ ಜನರಲ್ಲಿ ಕ್ಷಮೆಯಾಚಿಸಬೇಕು’ ಎಂದು ಅವರು ಆಗ್ರಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.